ಬೆಳ್ತಂಗಡಿ: ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಆ.10 ರಂದು ಸಾಧಕರ ದಿನಾಚರಣೆ ನಡೆಯಲಿದೆ. ಬೆಳಗ್ಗೆ 10ಕ್ಕೆ ಉಜಿರೆಯ ಎಸ್.ಡಿ.ಎಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಸಾಧಕರ ದಿನಾಚರಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ 2021-22 ರ ಸಾಲಿನಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು.
ಕಾರ್ಯಕ್ರಮದಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆಯವರು, ಬರ್ಮಿಂಗ್ ಹ್ಯಾಂನಲ್ಲಿ ಸಂಪನ್ನಗೊಂಡ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಜಯಿಸಿದ ವೇಟ್ ಲಿಫ್ಟರ್, ಎಸ್.ಡಿ.ಎಂ. ಕಾಲೇಜಿನ ಹೆಮ್ಮೆಯ ಹಿರಿಯ ವಿದ್ಯಾರ್ಥಿ ಗುರುರಾಜ್ ಪೂಜಾರಿ ಹಾಗೂ ಅಭಿವೃದ್ಧಿ ಕಾರ್ಯಗಳ ಮೂಲಕ ಉಜಿರೆಯ ಸೌಂದರ್ಯವನ್ನು ಇಮ್ಮಡಿಗೊಳಿಸಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಸನ್ಮಾನ ನಡೆಯಲಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಪಿ. ಎನ್. ಉದಯಚಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.