ಬೆಂಗಳೂರು: ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ನಿರ್ದೇಶಕ ರಿಷಬ್ ಶೆಟ್ಟಿ ಅವರ ಕಾಂತಾರ ಚಲನಚಿತ್ರದ ಕುರಿತು ಟೀಕಿಸಿದ್ದಕ್ಕೆ ನಟ ಚೇತನ್ ಕುಮಾರ್ ಅವರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಲು ರಾಜ್ಯ ಹೈಕೋರ್ಟ್ ನಿರಾಕರಿಸಿದೆ.
ಈ ಹಿಂದೆ ಸಂದರ್ಶನವೊಂದರಲ್ಲಿ ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದುನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಚೇತನ್ ನಮ್ಮ ಪಂಬದ/ ನಕಲಿ/ಪರವರ ಬಹುಜನ ಸಂಪ್ರದಾಯಗಳು ವೈದಿಕ ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲ ನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ಹೇಳಿದ್ದರು. ಅದಕ್ಕೆ ರಾಜ್ಯಾದ್ಯಂತ ತೀವ್ರ ಖಂಡನೆ ಮತ್ತು ವಿರೋಧ ವ್ಯಕ್ತವಾಗಿತ್ತು.
ಚೇತನ್ ಹೇಳಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ರಿಷಬ್ ತಂದೆ ಭಾಸ್ಕರ್ ಶೆಟ್ಟಿ ಸೇರಿದಂತೆ ಕರಾವಳಿಯ ದೈವಾರಾಧಕರು, ದೈವ ನರ್ತಕರು, ರಿಷಬ್ ಶೆಟ್ಟಿ ಅಭಿಮಾನಿಗಳು ಚೇತನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಮಂಗಳೂರಿಗೆ ಬಂದು ಈ ರೀತಿಯ ಹೇಳಿಕೆ ನೀಡಿ ಅಂತ ಸವಾಲು ಹಾಕಿದ್ದರು.
ನಟ ಚೇತನ್ ವಿರುದ್ದ ಬೆಂಗಳೂರಿನ ನಿವಾಸಿ ಶಿವಕುಮಾರ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಶೇಷಾದ್ರಿಪುರಂ ಪೊಲೀಸರು ಐಪಿಸಿ ಸೆಕ್ಷನ್ 505(2) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಕಾಂತಾರದಲ್ಲಿ ಚಿತ್ರಿಸಲಾದ ಭೂತ ಕೋಲ ಸಂಪ್ರದಾಯದ ಬಗ್ಗೆ ಪ್ರತಿಕ್ರಿಯಿಸುವಾಗ ಚೇತನ್ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಪ್ರಕರಣದ ರದ್ದತಿ ಕೋರಿ ಚೇತನ್ ಅವರು ಹೈ ಕೋರ್ಟ್ ಮೆಟ್ಟಿಲು ಏರಿದ್ದರು. ಹೈ ಕೋರ್ಟಿನಲ್ಲಿ ಗುರುವಾರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 (2) ಅಡಿಯಲ್ಲಿ, ನಟ ಚೇತನ್ ಕುಮಾರ್ ನೀಡಿದ ಹೇಳಿಕೆಗಳು ಅಪರಾಧವಾಗಿದೆಯೇ ಅಥವಾ ಇಲ್ಲವೇ ಎಂಬ ಕುರಿತು ವಿಚಾರಣೆ ನಡೆಯುತ್ತಿತ್ತು.
ಮೊದಲ ಪ್ರತಿವಾದಿಯು , ಪೊಲೀಸರು ಸರಿಯಾದ ತನಿಖೆ ಮಾಡದೆ ಯಾಂತ್ರಿಕವಾಗಿ ಆರೋಪಪಟ್ಟಿ ಸಲ್ಲಿಸುತ್ತಾರೆ ಎಂದು ಹೇಳಲು ಸಾದ್ಯವಿಲ್ಲ. ಅರ್ಜಿದಾರರು ಅಗತ್ಯ ಜಾಮೀನು ಪಡೆಯಲು ಸೂಕ್ತವಾದ ನ್ಯಾಯಾಲಯವನ್ನು ಸಂಪರ್ಕಿಸಲು ಯಾವಾಗಲೂ ಸ್ವಾತಂತ್ರ್ಯವನ್ನು ಹೊಂದಿರುತ್ತಾರೆ. ಮತ್ತು ಅದನ್ನು ಕಾನೂನಿನ ಪ್ರಕಾರ ಸಂಬಂಧಪಟ್ಟ ನ್ಯಾಯಾಲಯವು ಪರಿಗಣಿಸುತ್ತದೆ’ ಎಂದು ನ್ಯಾಯಮೂರ್ತಿ ಎಂ ಐ ಅರುಣ್ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಈ ಹಿಂದೆ ಈ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ್ದ ಹಿರಿಯ ದೈವರಾಧಕ ಕುಮಾರ ಪಂಬದ, ಸಂಸ್ಕೃತಿಯ ಅವಹೇಳನ ಆದಾಗೆಲ್ಲ ನಾವು ದೈವದ ಮುಂದೆ ಪ್ರಾರ್ಥನೆ ಮಾಡುತ್ತೇವೆ. ನಾವು ಸೇವೆ ಕೊಡುವ ದೈವಗಳ ಮುಂದೆಯೇ ನಾವು ಪ್ರಾರ್ಥನೆ ಮಾಡುತ್ತೇವೆ. ನಮ್ಮ ಮೂಲ ಆರಾಧನೆಯ ಪಂಜುರ್ಲಿ ದೈವದ ಮುಂದೆ ಈ ಬಗ್ಗೆ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದಿದ್ದರು.