ಎಸ್‍ಎಸ್‍ಎಲ್‍ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆ

ಎಸ್‍ಎಸ್‍ಎಲ್‍ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆ

GK   ¦    Jun 15, 2020 07:14:42 PM (IST)
ಎಸ್‍ಎಸ್‍ಎಲ್‍ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆ

ಸುಳ್ಯ: ಜೂನ್ 25 ರಿಂದ ಜು.4ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸುಳ್ಯ ತಾಲೂಕಿಲ್ಲಿ ನಡೆಸುವ ಸಿದ್ಧತೆಗಳ ಬಗ್ಗೆ ಚರ್ಚಿಸಲು ಸುಳ್ಯ ತಹಶೀಲ್ದಾರ್ ಅನಂತಶಂಕರ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ ತಾಲೂಕು ಕಚೇರಿಯಲ್ಲಿ ನಡೆಯಿತು.

ಪರೀಕ್ಷಾ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ್ ಸುಳ್ಯ ತಾಲೂಕಿನಲ್ಲಿ 1,962 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಆರು ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ತುರ್ತು ಸಂದರ್ಭದ ಅಗತ್ಯಕ್ಕಾಗಿ ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗುವುದು. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ವಿದ್ಯಾರ್ಥಿಗಳನ್ನು ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರದಿಂದ ಮತ್ತು ಹಿಂತಿರುಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು ಎಂದು ಅವರು ವಿವರಿಸಿದರು.

ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಲಾಗುತ್ತಿದ್ದು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯ ತಕ್ಕದ್ದು. ವಿದ್ಯಾರ್ಥಿಗಳಿಗೆ ಮಾಸ್ಕ್ ಗಳನ್ನು ವಿತರಿಸಲಾಗುತ್ತದೆ. ಸ್ಯಾನಿಟೈಸ್ ಮಾಡಿ ಥರ್ಮಲ್ ಸ್ಕ್ರೀನಿಂಗ್ ನಡೆಸಿದ ಬಳಿಕ ಪರೀಕ್ಷಾ ಕೊಠಡಿಗೆ ಬಿಡಲಾಗುವುದು. ಶೀತ, ಜ್ವರ ಇದ್ದರೆ ಅಂತಹಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವಿಶೇಷ ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ. ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮತ್ತು ಹೊರಗೆ ಬರುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಗುಂಪು ಸೇರದಂತೆ ವ್ಯವಸ್ಥೆ ಮಾಡಲಾಗುತ್ತದೆ. ಕೇರಳದ ಭಾಗದಿಂದ ಪರೀಕ್ಷಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪಾಸ್ ಅಗತ್ಯವಿಲ್ಲ. ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ಗಡಿಯ ಚೆಕ್‍ಪೋಸ್ಟ್ ನಲ್ಲಿ ತೋರಿಸಿದರೆ ಸಾಕು ಎಂದು ಹೇಳಿದರು.

ಖಾಸಗಿಯಾಗಿ ತಾಲೂಕಿನಿಂದ 35 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಅವರು ಮಂಗಳೂರು ಪರೀಕ್ಷಾ ಕೆಂದ್ರಕ್ಕೆ ತೆರಳಿ ಪರೀಕ್ಷೆಗೆ ಹಾಜರಾಗಬೇಕು ಎಂದು ಶಿಕ್ಷಣಾಧಿಕಾರಿ ಮಾಹಿತಿ ನೀಡಿದರು.

ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್‍ಚಂದ್ರ ಜೋಗಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಲಕ್ಷ್ಮೀಶ ರೈ, ಶಿಕ್ಷಣ ಇಲಾಖೆಯ ಶಿವಪ್ರಸಾದ್, ತಾಲೂಕು ಪಂಚಾಯಿತಿ ವ್ಯವಸ್ಥಾಪಕ ಹರೀಶ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ,  ನಗರ ಪಂಚಾಯಿತಿ ಇಂಜಿನಿಯರ್ ಶಿವಕುಮಾರ್, ಕೆಎಸ್‍ಆರ್‍ಟಿಸಿ ಡಿಪ್ಪೋ ವ್ಯವಸ್ಥಾಪಕ ಸುಂದರರಾಜ್, ಸಂಚಾರಿ ನಿರೀಕ್ಷಕ ಕರುಣಾಕರ ಮತ್ತಿತರರು ಭಾಗವಹಿಸಿದ್ದರು.