ಕೆ.ಆರ್.ಪೇಟೆ: ತಾಲೂಕಿನ ಶೀಳನೆರೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಸಂಘಟಿತ ಹೋರಾಟದ ನೇತೃತ್ವ ವಹಿಸಿದ್ದ ಸವಿತಾ ಬಲರಾಂ ಎಂಬ ಮಹಿಳೆಯ ಮೇಲೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಗುಂಪು ಹಲ್ಲೆ ನಡೆಸಿರುವುದನ್ನು ಖಂಡಿಸಿ ನೂರಾರು ಮಹಿಳೆಯರು ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ(ಶಿವರಾಮೇಗೌಡ ಬಣ) ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮೂರು ತಿಂಗಳಿನಿಂದಲೂ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಿ ಗ್ರಾಮದಲ್ಲಿ ಉಂಟಾಗಿರುವ ಕಲುಷಿತ ವಾತಾವರಣವನ್ನು ತಿಳಿಗೊಳಿಸಬೇಕು ಎಂದು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆಯೂ ಆಗಿರುವ ಸವಿತಾ ಬಲರಾಂ ಮಹಿಳೆಯರನ್ನು ಸಂಘಟಿಸಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಜಿಲ್ಲಾಧಿಕಾರಿಗಳ ಕಚೇರಿ, ಅಬಕಾರಿ ಅಧಿಕಾರಿಗಳ ಕಚೇರಿ, ಪಾಂಡವಪುರ ಉಪವಿಭಾಗಾಧಿಕಾರಿಗಳ ಕಚೇರಿ ಸೇರಿದಂತೆ ವಿವಿಧ ಅಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಅಕ್ರಮ ಮದ್ಯ ಮಾರಾಟಗಾರರಿಗೆ ಬಿಸಿ ಮುಟ್ಟಿಸಿದ್ದರು.
ಇದನ್ನು ಸಹಿಸದ ಅಕ್ರಮ ಮದ್ಯ ಮಾರಾಟಗಾರರು ಸವಿತಾಬಲರಾಂ ಅವರ ಮೇಲೆ ಮಂಗಳವಾರ ಸಂಜೆ ಅದೇ ಗ್ರಾಮದ ಅವಿನಾಶ್, ಚಂದನ್ ಮತ್ತು ಗಾಯಿತ್ರಮ್ಮ ಎಂಬುವರ ಗುಂಪು ಸವಿತಾ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಬಟ್ಟೆ ಹರಿದು ಎಳೆದಾಡಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತಕ್ಷಣ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕಠಿಣ ಕ್ರಮಕ್ಕೆ ಮೇಲಧಿಕಾರಿಗಳಿಗೆ ಪತ್ರ ಬರೆದು ಜನಸಾಮಾನ್ಯರು ನೆಮ್ಮದಿಯಿಂದ ಜೀವನ ನಡೆಸಲು ಅವಕಾಶ ನೀಡಬೇಕು. ಅಲ್ಲದೆ, ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿತಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯ ವಿಷಯ ತಿಳಿದು ಗ್ರಾಮಕ್ಕೆ ಭೇಟಿ ನೀಡಿದ ವೃತ್ತ ನಿರೀಕ್ಷಕ ಡಿ.ಯೋಗೇಶ್ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ಹಲ್ಲೆ ನಡೆಸಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಸಿಪಿಐ ಯೋಗೇಶ್, ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಜರುಗಿಸುವ ಭರವಸೆ ನೀಡಿದ ನಂತರ ಪ್ರತಿಭಟನಾನಿರತ ಮಹಿಳೆಯರು ತಮ್ಮ ಪ್ರತಿಭಟನೆಯನ್ನು ವಾಪಸ್ ಪಡೆದರು.