ಮಡಿಕೇರಿ: ನದಿ, ತೊರೆ, ಹಳ್ಳಕೊಳ್ಳ ಇತರೆ ಕುಡಿಯಲು ಬಳಸುವ ನೀರಿನಲ್ಲಿ ಮಾಲಿನ್ಯ ಉಂಟಾಗದಂತೆ ಜಾಗೃತಿ ವಹಿಸುವುದು ಅಗತ್ಯ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾದ ಜೆ.ಜಿ ಕಾವೇರಿಯಪ್ಪ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ, ಕುಶಾಲನಗರ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ, ಸರ್ಕಾರಿ ಪಾಲಿಟೆಕ್ನಿಕ್ ಕುಶಾಲನಗರ ಇವರ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ನಡೆದ ಜೀವನದಿ ಕಾವೇರಿ ನೀರಿನ ಬಳಕೆ ಮತ್ತು ಪರಿಸರದ ಸಂರಕ್ಷಣೆ ಬಗೆಗಿನ ಮಾಹಿತಿ ಮತ್ತು ಉಪನ್ಯಾಸ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಕಾವೇರಿ ನದಿಯ ಮಹತ್ವ ಹಾಗೂ ಶುದ್ಧವಾಗಿ ಹರಿಯುವ ನದಿ ನೀರನ್ನು ಕಲುಷಿತಗೊಳ್ಳದಂತೆ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕಿದೆ ಎಂದರು. ಮಡಿಕೇರಿ ನಗರದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಾದ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಅವರು ಮಾತನಾಡಿ ಜೀವನದಿ ಕಾವೇರಿ ನದಿಯ ಪಾವಿತ್ರ್ಯತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಶುದ್ಧವಾಗಿ ಹರಿಯುವ ಕಾವೇರಿ ನದಿ ನೀರನ್ನು ಅಶುದ್ಧಗೊಳಿಸದಂತೆ ಎಚ್ಚರಿಕೆ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುತ್ತಿರುವುದು ಅಗತ್ಯವಾಗಿದೆ ಎಂದು ಹೇಳಿದರು.
ಕಾವೇರಿ ನದಿ ಸ್ವಚ್ಚತಾ ಆಂದೋಲನದ ರಾಜ್ಯ ಸಂಚಾಲಕರಾದ ಎಂ.ಎನ್.ಚಂದ್ರಮೋಹನ್ ಮಾತನಾಡಿ ಕಳೆದ 6 ವರ್ಷಗಳಿಂದ ಕಾವೇರಿ ನದಿ ಸ್ವಚ್ಚತೆ ಸಂಬಂಧಿಸಿದಂತೆ ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ಅಯೋಜಿಸಲಾಗುತ್ತಿದೆ. ಪ್ರಥಮ ಹಂತದಲ್ಲಿ ಕಾವೇರಿ ನದಿ ಪಾತ್ರದ ಗ್ರಾಮಗಳಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕುಂಡಲು ಅವರು ಮಾತನಾಡಿ ಜಿಲ್ಲೆಯಲ್ಲಿ ಈ ವರ್ಷ ಶೇ. 31 ರಷ್ಟು ಪ್ರಮಾಣ ಮಳೆ ನೀರಿನ ಅಭಾವ ಕಂಡುಬಂದಿದೆ. ಇದಕ್ಕೆ ಮುಖ್ಯ ಕಾರಣ ಪರಿಸರ ನಾಶವಾಗಿದೆ. ಆದ್ದರಿಂದ ಪರಿಸರ ಸಂರಕ್ಷಣೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಒಂದು ಕಡೆ ಹೆಚ್ಚಾಗಿ ರೆಸಾರ್ಟ್, ಹೋಮ್ ಸ್ಟೇ ಹಾಗೂ ಕೈಗಾರಿಕೀಕರಣದ ಬೆಳವಣಿಗೆಯಾಗುತ್ತಿರುವುದರಿಂದ ಪರಿಸರ ನಾಶವಾಗುತ್ತಿದೆ ಇದರ ಜೊತೆಗೆ ಇಲ್ಲಿನ ಕಲುಷಿತ ನೀರು ಕಾವೇರಿ ನದಿಗೆ ಸೇರುವುದರಿಂದ ಮಾಲಿನ್ಯ ನದಿಯಲ್ಲಿ ಕಂಡುಬರುತ್ತಿದೆ ಎಂದು ತಿಳಿಸಿದರು. ಅರಣ್ಯ ಇಲಾಖೆ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಾಕಷ್ಟು ಸ್ವಚ್ಚತೆ ಹಾಗೂ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಅವರು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಲೋಕೇಶ್ ಸಾಗರ್ ಅವರು ಮಾತನಾಡಿ ಜಲಮೂಲಗಳನ್ನು ಸಂರಕ್ಷಿಸುವ ಕೆಲಸ ಇಲಾಖೆ ಮಟ್ಟದಲ್ಲಿ ಜೊತೆಗೆ ಸಾರ್ವಜನಿಕರು ಇದರಲ್ಲಿ ಮುಖ್ಯ ಪಾತ್ರವಹಿಸುತ್ತಾರೆ, ಜಿಲ್ಲೆಯು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿರುವುದರಿಂದ ಸ್ವಚ್ಚತೆ ಕಡೆಗೂ ಹೆಚ್ಚು ಗಮನ ಹರಿಸುವುದು ಅನಿವಾರ್ಯವಾಗಿದೆ ಎಂದರು.
ಹಿರಿಯ ಪರಿಸರ ಅಧಿಕಾರಿ ಕೆ.ಎಂ.ಲಿಂಗರಾಜು ಅವರು ಮಾತನಾಡಿ ನದಿ ತೊರೆ ಹಳ್ಳಕೊಳ್ಳಕ್ಕೆ ಸಾಕಷ್ಟು ಮಾಲಿನ್ಯ ಉಂಟಾಗುವುದರಿಂದ, ಮಾಲಿನ್ಯ ನಿಯಂತ್ರಣಕ್ಕೆ ಇಲಾಖೆ ಮಟ್ಟದಲ್ಲಿ ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಲತಜ್ಞರಾದ ಎ.ಎಂ. ಸೂರಜ್ ನೀರಿನ ಸಂರಕ್ಷಣೆ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಪಿ.ಚಂದ್ರಕಲಾ, ಮಂಜುಳಾ ಹಾಗೂ ಸೋಮವಾರಪೇಟೆ ತಾಲೂಕು ಪಂಚಾಯತ್ ಸದಸ್ಯರಾದ ಪುಷ್ಪಾ, ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್. ಗಣೇಶನ್, ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಶಿವಪ್ಪ ಮತ್ತಿತರರು ಹಾಜರಿದ್ದರು.
ಕಾವೇರಿ ನದಿ ಸ್ವಚ್ಚತಾ ಆಂದೋಲನ ರಾಜ್ಯ ಸಂಚಾಲಕರಾದ ಎಂ.ಎನ್. ಚಂದ್ರಮೋಹನ್ ಅವರು ಸ್ವಾಗತಿಸಿದರು. ಕುಮಾರಿ ಸಿಂಚನ ಚಂದ್ರಮೋಹನ್ ನಿರೂಪಿಸಿದರು. ಕಾವೇರಿ ನದಿ ಸ್ವಚ್ಚತಾ ಆಂದೋಲನ ಜಿಲ್ಲಾ ಸಂಚಾಲಕರದ ರೀನಾ ಪ್ರಕಾಶ್ ವಂದಿಸಿದರು.