ಮಡಿಕೇರಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘ ಜ.20 ರಂದು ನಗರದಲ್ಲಿ ನಡೆಸುತ್ತಿರುವ ಮೌನ ಪ್ರತಿಭಟನಾ ಮೆರವಣಿಗೆಗೆ ಜಿಲ್ಲಾ ಬಿಜೆಪಿ ಬೆಂಬಲ ವ್ಯಕ್ತಪಡಿಸಿದೆ.
ಪತ್ರಿಕಾ ಹೇಳಿಕೆ ನೀಡಿರುವ ಬಿಜೆಪಿ ಜಿಲ್ಲಾಧ್ಯಕ್ಷ ಮನುಮುತ್ತಪ್ಪ ದೇಶದ ಗಡಿ ಕಾಯುವ ಮೂಲಕ ಪ್ರಜೆಗಳ ರಕ್ಷಣೆಯನ್ನು ಮಾಡಿ ನಿವೃತ್ತ ಜೀವನ ನಡೆಸುತ್ತಿರುವ ಯೋಧರ ಬೇಡಿಕೆಗಳಿಗೆ ರಾಜ್ಯ ಸರಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕೆಂದು ಒತ್ತಾಯಿಸಿದ್ದಾರೆ. ಶುಕ್ರವಾರ ಮಾಜಿ ಸೈನಿಕರು ನಡೆಸುತ್ತಿರುವ ಪ್ರತಿಭಟನೆಗೆ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಲಿದೆ ಎಂದು ತಿಳಿಸಿರುವ ಅವರು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಜಿಲ್ಲೆಯ ಮಾಜಿ ಯೋಧರಿಗೂ ಗೌರವ ಇಲ್ಲದಾಗಿದೆ ಎಂದು ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಅನೇಕ ಒತ್ತುವರಿ ಪ್ರಕರಣಗಳಿದ್ದರೂ ಯಾವುದರ ಮೇಲೆಯೂ ಕಾನೂನು ಕ್ರಮ ಕೈಗೊಳ್ಳದ ಕಂದಾಯ ಇಲಾಖೆ ಮಾಜಿ ಯೋಧರನ್ನು ಮಾತ್ರ ಗುರಿಯಾಗಿಸಿಕೊಂಡು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವುದಲ್ಲದೆ ನಿವೃತ್ತ ಸೇನಾಧಿಕಾರಿಗಳ ವಿರುದ್ಧ ಮೊಕದ್ದಮೆ ದಾಖಲಿಸಿರುವುದು ಖಂಡನೀವೆಂದು ಮನುಮುತ್ತಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಜಿ ಸೈನಿಕರಿಗೆ ಭೂಮಿಯ ಹಕ್ಕನ್ನು ನೀಡಬೇಕೆನ್ನುವ ನಿಯಮವಿದ್ದರೂ ಜಿಲ್ಲಾಡಳಿತ ಇದನ್ನು ಪಾಲಿಸುತ್ತಿಲ್ಲ. ಕಳೆದ ಅನೇಕ ವರ್ಷಗಳಿಂದ ನಿವೇಶನಕ್ಕಾಗಿ ಮಾಜಿ ಸೈನಿಕರ ಸಂಘ ಹಲವು ಮನವಿ ಪತ್ರಗಳನ್ನು ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎಂದು ಆರೋಪಿಸಿರುವ ಅವರು ಸರಕಾರ ತಕ್ಷಣ ಎಚ್ಚೆತ್ತುಕೊಂಡು ನಿವೇಶನ ಮಂಜೂರಾತಿಗೆ ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.