ಮಡಿಕೇರಿ: ದಿಡ್ಡಳ್ಳಿಯ ಮೂಲನಿವಾಸಿ ಗಿರಿಜನರಿಗೆ ಪುನರ್ ವಸತಿ ಕಲ್ಪಿಸುವ ಸಂಬಂಧ ಇದುವರೆಗೆ ಕೈಗೊಳ್ಳಲಾಗಿರುವ ಪ್ರಗತಿಯ ಪಿಪಿಟಿ ಸಹಿತ ಅಗತ್ಯ ಮಾಹಿತಿ ಸಿದ್ಧತೆ ಮಾಡಿಕೊಳ್ಳುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಂದಾಯಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಮೂಲನಿವಾಸಿ ಗಿರಿಜನರಿಗೆ ಪುನರ್ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಗುರುತಿಸಲಾಗಿರುವ ಜಾಗ ಸಮತಟ್ಟು ಮಾಡುವ ಕಾರ್ಯ ನಡೆದಿದೆ. ಹಾಗೆಯೇ ಪುನರ್ ವಸತಿಗಾಗಿ 611 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಅರ್ಜಿಗಳ ಪರಿಶೀಲನಾ ಕಾರ್ಯ ಯಾವ ಹಂತದಲ್ಲಿದೆ. ಮತ್ತಿತರ ಮಾಹಿತಿಗಳನ್ನು ಕೂಲಂಕಷವಾಗಿ ಪರಿಶೀಲಿಸುವುದರ ಜೊತೆಗೆ ಜಿ.ಪಂ.ಸಿಇಓ ಅವರ ಜೊತೆ ಚರ್ಚಿಸಿ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಈ ಬಗ್ಗೆ ಮಾಹಿತಿ ನೀಡಿದ ಐಟಿಡಿಪಿ ಇಲಾಖಾ ಅಧಿಕಾರಿ ಪ್ರಕಾಶ್ ಅವರು ಪುನರ್ ವಸತಿಗಾಗಿ ಸಲ್ಲಿಕೆಯಾಗಿರುವ 611 ಅರ್ಜಿಗಳಲ್ಲಿ 150 ಕ್ಕೂ ಹೆಚ್ಚು ಅರ್ಜಿಗಳ ದಾಖಲೆಗಳ ಪರಿಶೀಲನಾ ಕಾರ್ಯ ಪೂರ್ಣಗೊಂಡಿದ್ದು, ಉಳಿದ ದಾಖಲೆಗಳ ಪರಿಶೀಲನಾ ಕಾರ್ಯವು ಆಯಾಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುತ್ತಿವೆ ಎಂದು ಅವರು ತಿಳಿಸಿದರು.
ಕಾವೇರಿ ನದಿ ಪಾತ್ರದಲ್ಲಿ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸುವಂತೆ ಪಿಡಿಓಗಳ, ಕಂದಾಯಾಧಿಕಾರಿಗಳ ಹಾಗೂ ಇತರೆ ಸಭೆಗಳಲ್ಲಿ ಚರ್ಚಿಸುತ್ತಾ ಬರಲಾಗಿದೆ. ಆದರೆ ಪ್ರಗತಿ ಕಾರ್ಯ ಎಷ್ಟರ ಮಟ್ಟಿಗೆ ನಡೆಯುತ್ತಿದೆ ಎಂಬುದರ ಬಗ್ಗೆಯೂ ಅವಲೋಕನ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ನದಿಗೆ ಕಲುಷಿತ ನೀರು ಹೋಗದಂತೆ ನೋಡಿಕೊಳ್ಳುವುದು, ಪ್ಲಾಸ್ಟಿಕ್ ಬಿಸಾಡದಂತೆ ಎಚ್ಚರಿಕೆ ವಹಿಸುವುದು ಮತ್ತಿತರ ಸಂಬಂಧ ವಿಶೇಷವಾಗಿ ಗಮನಹರಿಸಬೇಕು. ಜೊತೆಗೆ ಜಿಲ್ಲೆಯ ಗ್ರಾ.ಪಂ. ಹಾಗೂ ಪಟ್ಟಣಗಳಲ್ಲಿ ಕಸ ವಿಲೇವಾರಿಯನ್ನು ವೈಜ್ಞಾನಿಕವಾಗಿ ನಿರ್ವಹಿಸುವಂತೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಪಡ್ನೇಕರ್ ಅವರು ವಿರಾಜಪೇಟೆ ತಾಲ್ಲೂಕಿನ ಕಾಕೋಟುಪರಂಬು, ಹಾಲುಗುಂದ, ಕಣ್ಣಂಗಾಲ, ಸಿದ್ದಾಪುರ ಈ ನಾಲ್ಕು ಗ್ರಾ.ಪಂ.ಗಳು ಕಾವೇರಿ ನದಿ ಪಾತ್ರದ ವ್ಯಾಪ್ತಿಯಲ್ಲಿದ್ದು, ಈ ಪ್ರದೇಶದಲ್ಲಿನ ಗ್ರಾಮಗಳು ಹಾಗೂ ರೆಸಾರ್ಟ್ ಗಳಿಂದ ಕಲುಷಿತ ನೀರು ಬಿಡದಂತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಆಗಾಗ ಪರಿಶೀಲನೆ ಮಾಡಲಾಗುತ್ತಿದೆ.
ಜಿಲ್ಲಾ ಕೇಂದ್ರದಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಾಗ ಗುರುತಿಸಿ ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸುವ ಕೆಲಸವಾಗಬೇಕು. ಈಗಾಗಲೇ ಸರ್ಕಾರ 20 ಲಕ್ಷ ರೂ. ಹಣ ಬಿಡುಗಡೆ ಮಾಡಿದ್ದು, 3 ಕೋಟಿ ರೂ. ವೆಚ್ಚದಲ್ಲಿ ಗಾಂಧಿ ಭವನ ನಿರ್ಮಾಣವಾಗಲಿದೆ. ಆದ್ದರಿಂದ ಕೂಡಲೇ ಜಾಗ ನಿಗದಿಪಡಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಸೂಚನೆ ನೀಡಿದರು.
ಹಾಗೆಯೇ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಭವನ, ರೈತ ಸಂಪರ್ಕ ಕೇಂದ್ರ, ವಿದ್ಯಾರ್ಥಿ ನಿಲಯ, ಅಂಗನವಾಡಿ ನಿರ್ಮಾಣ ಸಂಬಂಧ ಆದ್ಯತೆ ಮೇಲೆ ನಿವೇಶನ ಒದಗಿಸುವಂತೆ ತಹಶೀಲ್ದಾರರಿಗೆ ತಿಳಿಸಿದರು. ಈಗಾಗಲೇ ಸರ್ಕಾರದ ನಾನಾ ಇಲಾಖೆಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ಭೂಮಿಯನ್ನು ಸಂರಕ್ಷಣೆ ಮಾಡಿಕೊಳ್ಳುವತ್ತ ವಿಶೇಷ ಗಮನಹರಿಸುವಂತೆ ಜಿಲ್ಲಾಧಿಕಾರಿ ಹೇಳಿದರು.
ಕೃಷಿ ಹಾಗೂ ತೋಟಗಾರಿಕೆ ಬೆಳೆಹಾನಿ ಪರಿಹಾರ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ಡಾಟಾ ಎಂಟ್ರಿ ಮಾಡುವಂತೆ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮತ್ತು ತಹಶೀಲ್ದಾರರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕೆ.ರಾಮಪ್ಪ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಬಿ.ಆರ್.ಗಿರೀಶ್, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕರಾದ ಡಾ.ಸಿ.ನಾಗರಾಜು ಐಟಿಡಿಪಿ ಇಲಾಖೆ ಅಧಿಕಾರಿ ಪ್ರಕಾಶ್ ತಮ್ಮ ಇಲಾಖಾ ವ್ಯಾಪ್ತಿಯ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ತಹಶೀಲ್ದಾರರಾದ ಕುಸುಮ, ಮಹದೇವ ಸ್ವಾಮಿ, ಕೃಷ್ಣ, ಶಿರಸ್ತೆದಾರರಾದ ಭಾಗ್ಯಲಕ್ಷ್ಮಿ, ಶ್ರೀಷ, ನಾನಾ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರು ಹಾಜರಿದ್ದರು.