ಚಿಕ್ಕಮಗಳೂರು: ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ತಡೆಯಲು ಜಿಲ್ಲಾಡಳಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ.ಸತ್ಯವತಿ ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರು ದೇಶದ ಬೆನ್ನೆಲುಬು ಅವರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ಜಿಲ್ಲೆಯಲ್ಲಿ 2015 ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೆ 50, 2016 ರ ಜನವರಿಯಿಂದ ಡಿಸೆಂಬರ್ ಮಾಹೆಯ ಅಂತ್ಯದ ವರೆಗೆ 70 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡೂರು ತಾಲ್ಲೂಕಿನಲ್ಲೆ ಡಿಸೆಂಬರ್ ಮಾಹೆಯಲ್ಲಿ 9 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಹಿಡಿ ಕುಟುಂಬ ನಷ್ಟ ಅನುಭವಿಸುವುದರಿಂದ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಹಾದಿ ತುಳಿಯಬಾರುದು. ರೈತರೊಂದಿಗೆ ಜಿಲ್ಲಾಡಳಿತವಿದ್ದು ತಮಗೆ ಯಾವುದೇ ಸಮಸ್ಯೆ ಎದುರಾದರು ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಹೇಳಿದ ಅವರು ಜಿಲ್ಲೆಯಲ್ಲಿ ಈಗಾಗಲೆ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಕೂಡಲೇ ಸರ್ಕಾರದಿಂದ ನೀಡುವ ಸವಲತ್ತುಗಳನ್ನು ವಿತರಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ರೈತರು ಆತ್ಮಹತ್ಯೆ ಮಾಡಿಕೊಂಡ ಕುರಿತು ಪರಿಶೀಲಿಸಿ ಪರಿಹಾರ ನೀಡುತ್ತದೆ. ಮರಣ ಹೊಂದಿದ ರೈತರ ಕುಟುಂಬಕ್ಕೆ ಆತನ ಪತ್ನಿಗೆ 2 ಸಾವಿರ ರೂ. ಗಳ ಮಾಸಾಶನ, ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ವ್ಯವಸ್ಥೆ ಮಾಡಲಾಗುತ್ತದೆಯಲ್ಲದೇ ಮರಣ ಹೊಂದಿದ ರೈತರು ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ ಎಂದರು.