ಮಡಿಕೇರಿ: ಕಾಂಗ್ರೆಸ್ ನೆೇತೃತ್ವದ ರಾಜ್ಯ ಸರಕಾರದ ಕಳೆದ ನಾಲ್ಕು ವರ್ಷಗಳ ಆಡಳಿತಾವಧಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿನ ವೈಫಲ್ಯತೆ, ಮಿತಿ ಮೀರುತ್ತಿರುವ ಭ್ರಷ್ಟಾಚಾರವನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿತು.
ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರುಗಳ ನೆೇತೃತ್ವದಲ್ಲಿ ಪಕ್ಷದ ವಿವಿಧ ಘಟಕಗಳ ಪ್ರಮುಖರು ಮತ್ತು ಕಾರ್ಯಕರ್ತರು ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಸರಕಾರದ ವಜಾಕ್ಕೆ ಒತ್ತಾಯಿಸಿದರು.
ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಸ್ವಚ್ಛ, ದಕ್ಷ ಆಡಳಿತದ ಭರವಸೆಯ ಮೇಲೆ ಆಡಳಿತಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ ಎಂದು ಟೀಕಿಸಿದರು. ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ 1 ಸಾವಿರ ಕೋಟಿ ರೂ.ಗಳನ್ನು ಪಕ್ಷದ ಹೈಕಮಾಂಡ್ ಗೆ ಲಂಚವಾಗಿ ನೀಡಿರುವ ಆರೋಪವಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆೆ ನಡೆಯಬೇಕು ಮತ್ತು ತನಿಖೆಯಾಗುವವರೆಗೆ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಬಿಜೆಪಿಯ ನೈತಿಕತೆಯ ಬಗ್ಗೆ ಪ್ರಶ್ನಿಸುತ್ತಿದ್ದ ಕಾಂಗ್ರೆಸ್ ನ ಆಡಳಿತಾವಧಿಯಲ್ಲಿ ಜಿಲ್ಲಾಧಿಕಾರಿ, ಡಿವೈಎಸ್ಪಿ ಆತ್ಮಹತ್ಯೆಯಂತಹ ಪ್ರಕರಣಗಳು ನಡೆದಿದ್ದು, ಇವುಗಳೆಲ್ಲದಕ್ಕೂ ಕಿರುಕುಳವೇ ಕಾರಣವಾಗಿದೆಯೆಂದು ಆರೋಪಿಸಿದ ಕೆ.ಜಿ. ಬೋಪಯ್ಯ, ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾಗಿರುವ 2 ಲಕ್ಷ ಕೋಟಿ ರೂ. ಆಸ್ತಿ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ತನಿಖೆಯಾಗಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದ ಬಿಜೆಪಿ ಪ್ರಮುಖರು ಐಟಿ ದಾಳಿಗೆ ಒಳಗಾದ ಸಚಿವ ರಮೇಶ್ ಜಾರಕಿ ಹೊಳಿ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು, ಶಾಸಕ ಎಂ.ಟಿ.ಬಿ.ನಾಗರಾಜ್ ಅವರನ್ನು ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಭ್ರಷ್ಟಾಚಾರದ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆಗೆ ಆದೇಶಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಸುಬ್ರಹ್ಮಣ್ಯ ಉಪಾಧ್ಯಾಯ, ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿ, ಪ್ರಮುಖರಾದ ಸುವಿನ್ ಗಣಪತಿ, ತೆಕ್ಕಡೆ ಶೋಭಾ ಮೋಹನ್, ಬೆಲ್ಲು ಸೋಮಯ್ಯ, ರವಿ ಬಸಪ್ಪ, ಕನ್ನಂಡ ಸಂಪತ್, ವಿ.ಕೆ. ಲೋಕೇಶ್, ಕಾಂತಿ ಬೆಳ್ಯಪ್ಪ, ಯಮುನಾ ಚಂಗಪ್ಪ, ಶಜಿಲ್ ಕೃಷ್ಣನ್, ನಾಗೇಶ್ ಕುಂದಲ್ಪಾಡಿ ಪಾಲ್ಗೊಂಡಿದ್ದರು.