ಮಡಿಕೇರಿ: ಕೊಡಗಿನ ಜನರ ಜನ ಜೀವನದ ಮೇಲೆ ದುಷ್ಪರಿಣಾಮಗಳನ್ನು ಬೀರುವ ಪಶ್ಚಿಮ ಘಟ್ಟಗಳ ಸಂರಕ್ಷಣೆಯ ಕುರಿತಾದ ಕಸ್ತೂರಿ ರಂಗನ್ ವರದಿಯನ್ನು ಪಕ್ಷಾತೀತ ನೆಲೆಗಟ್ಟಿನಲ್ಲಿ ತೀವ್ರವಾಗಿ ವಿರೋಧಿಸುವುದು ಮತ್ತು ಸಂಕಷ್ಟಕ್ಕೆ ಸಿಲುಕುವ ಎಲ್ಲಾ ಜಿಲ್ಲೆಗಳ ಜನಪ್ರತಿನಿಧಿಗಳ ಸಹಕಾರ ಪಡೆದು ಪ್ರಧಾನಿಗಳ ಬಳಿಗೆ ನಿಯೋಗ ತೆರಳುವ ಕುರಿತು ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ನಿರ್ಧಾರ ಕೈಗೊಂಡಿದೆ.
ಕೇಂದ್ರ ಸರ್ಕಾರ ಕೊಡಗಿನ 55 ಗ್ರಾಮಗಳನ್ನು ಒಳಗೊಂಡಂತೆ ರಾಜ್ಯದ 6 ರಿಂದ 7 ಜಿಲ್ಲೆಗಳ ಪಶ್ಚಿಮ ಘಟ್ಟ ಪ್ರದೇಶಗಳನ್ನು ಸೂಕ್ಷ್ಮ ಪರಿಸರ ವಲಯಕ್ಕೆ ಒಳಪಡಿಸಿ ಹೊರಡಿಸಿರುವ ಕರಡು ಅಧಿಸೂಚನೆ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷರಾದ ಅಪ್ಪಚ್ಚು ರಂಜನ್ ಮಾತನಾಡಿ ಸಭೆಯ ಮೂಲಕ ಹೊರ ಬಂದ ಪ್ರಮುಖ ಅಂಶಗಳತ್ತ ಬೆಳಕು ಚೆಲ್ಲಿದರು. ಪ್ರಸ್ತುತ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಗೆ ಪಕ್ಷಾತೀತವಾಗಿ ಎಲ್ಲರೂ 5 ಸಾವಿರಕ್ಕೂ ಹೆಚ್ಚಿನ ಆಕ್ಷೇಪಗಳನ್ನು ಸಲ್ಲಿಸಬೇಕೆಂದು ತಿಳಿಸಿದರು.
ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಅರಣ್ಯ ಸಚಿವರೊಂದಿಗೆ ಚರ್ಚಿಸಲಾಗುತ್ತದೆ. ಪಶ್ಚಿಮ ಘಟ್ಟ ಪ್ರದೇಶದ ಎಲ್ಲಾ ಶಾಸಕರು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ ಪಕ್ಷಾತೀತವಾಗಿ ನಿಯೋಗ ತೆರಳುವ ಮೂಲಕ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದರು.
ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಕಸ್ತೂರಿ ರಂಗನ್ ವರದಿ ಯಾವುದೇ ಕಾರಣಕ್ಕೂ ಅನುಷ್ಠಾನಗೊಳ್ಳದಂತೆ ನೋಡಿಕೊಳ್ಳುವ ಸಲುವಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಹಾಗೂ ವರದಿಯಿಂದ ಸಂಕಷ್ಟಕ್ಕೆ ಸಿಲುಕುವ 6 ರಿಂದ 7 ಜಿಲ್ಲೆಗಳವರನ್ನು ಒಗ್ಗೂಡಿಸಿ ಹೋರಾಟವನ್ನು ರೂಪಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.
ಜಿಲ್ಲೆಯ ಹಿತಕ್ಕಾಗಿ ನಡೆದ ಹೋರಾಟಗಳಿಗೆ ಸಂಬಂಧಿಸಿದಂತೆ ಚೇರಂಡ ನಂದಾ ಸುಬ್ಬಯ್ಯ ಸೇರಿದಂತೆ ಕೆಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಅದನ್ನು ಹಿಂದಕ್ಕೆ ಪಡೆಯಲು ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ.ರಮೇಶ್ ಅವರು ರಾಜ್ಯದ ಗೃಹ ಸಚಿವರನ್ನು ಭೇಟಿಯಾಗಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಸಮಿತಿ ಸದಸ್ಯರಾದ ಚೇರಂಡ ನಂದಾ ಸುಬ್ಬಯ್ಯ ಮಾತನಾಡಿ, ಜಿಲ್ಲೆಯ ಗ್ರಾಮಗಳನ್ನು ಸೂಕ್ಷ ಪರಿಸರ ವಲಯವನ್ನಾಗಿ ಘೋಷಿಸಿದ ಆ ಗ್ರಾಮಗಳು ಮಾತ್ರವಲ್ಲದೆ, ಅದರ ಸುತ್ತಮುತ್ತಲ 10 ಕಿ.ಮೀ.ವ್ಯಾಪ್ತಿಯ ಪ್ರದೇಶಗಳ ಜನತೆಯೂ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ವರದಿಯನ್ನು ವಿರೋಧಿಸಲು ಜನ ಮುಂದೆ ಬರಬೇಕೆಂದರು. ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ. ರಮೇಶ್, ಪ್ರಮುಖರಾದ ಧರ್ಮಜ ಉತ್ತಪ್ಪ, ಜೆಡಿಎಸ್ ಜಿಲ್ಲಾ ವಕ್ತಾರ ಭರತ್ ಕುಮಾರ್, ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ ಜಿ.ಚಿದ್ವಿಲಾಸ್ ಸೇರಿದಂತೆ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.