ಚಾಮರಾಜನಗರ: ಗುಂಡ್ಲುಪೇಟೆ ಉಪಚುನಾವಣೆ ಸಂಬಂಧ ನಾಮಪತ್ರ ಸಲ್ಲಿಕೆಯ ದಿನದಂದು ನಡೆದ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣೆಗೆ ಮುನ್ನವೇ ಪಿಎಸ್ಐ ಬಿ.ಎನ್.ಸಂದೀಪ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ದೂರು ನೀಡಿದ್ದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಇವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣಾ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗಕ್ಕೆ ವರ್ಗಾಯಿಸಿದೆ.
ಸಂದೀಪ್ ಕುಮಾರ್ ಕಳೆದ ಆರು ವರ್ಷಗಳಿಂದ ಜಿಲ್ಲೆಯ ಕೊಳ್ಳೇಗಾಲ, ಬೇಗೂರು ಹಾಗೂ ಪಟ್ಟಣ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಜನಮೆಚ್ಚುಗೆ ಗಳಿಸಿದ್ದರು. ಸಂಚಾರ ನಿಯಮ ಉಲ್ಲಂಘನೆ ಮಾಡುವವರು ಹಾಗೂ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದವರ ಪಾಲಿಗೆ ದುಸ್ವಪ್ನವಾಗಿದ್ದರು. ಆದರೆ ಪ್ರತಿಭಟನೆಯ ಸಂದರ್ಭದಲ್ಲಿ ಇವರ ಕಾರ್ಯಗಳು ರೈತ ಸಂಘ ಹಾಗೂ ಬಿಜೆಪಿಯವರ ಕೆಂಗಣ್ಣಿಗೆ ಗುರಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.