ಗುಂಡ್ಲುಪೇಟೆ: ರಾಜ್ಯದಲ್ಲಿ ಜನವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸುವ ಕಾಲ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಬರಗಿ, ಬೇರಂಬಾಡಿ, ಭೀಮನಬೀಡು, ಮಲ್ಲಯ್ಯನಪುರ ಮುಂತಾದ ಗ್ರಾಮಗಳಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿಯಾದ ನಿರಂಜನ್ ಕುಮಾರ್ ಅವರ ಪರ ಚುನಾವಣಾ ಪ್ರಚಾರ ಕೈಗೊಂಡ ಅವರು, ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ನಾವೆಲ್ಲರೂ ಈಡೇರಿಸಬೇಕಾಗಿದೆ. ಅದಕ್ಕೆ ಪೂರಕವಾಗಿ ಗುಂಡ್ಲುಪೇಟೆ ಮತ್ತು ನಂಜನಗೂಡಿನ ಉಪ ಚುನಾವಣೆಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕಾಗಿದೆ ಎಂದರು.
ವಿಧವಾ ವೇತನ, ವೃದ್ಧಾಪ್ಯ ವೇತನ, ಗರ್ಭಿಣಿಯರಿಗೆ ಧನಸಹಾಯ ಮುಂತಾದ ಯೋಜನೆಗಳನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿತ್ತು. ಆದರೆ ಅವುಗಳನ್ನು ಸಮರ್ಪಕವಾಗಿ ಮುಂದುವರಿಸಿಕೊಂಡು ಹೋಗುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ಪಡಿತರ ಆಹಾರ ಪದಾರ್ಥಗಳ ವಿತರಣೆಯಲ್ಲಿ ಸಹ ಸೋತಿದೆ. ಬಡ ಜನರಿಗೆ ವಿತರಿಸಬೇಕಾದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಲು ಅವಕಾಶ ಕಲ್ಪಿಸಿಕೊಡಲಾಗಿದೆ. ಕೇಂದ್ರ ಸರ್ಕಾರ ಜನಪರ ಯೋಜನೆಗಳಿಗಾಗಿ ನೀಡಿರುವ ಅನುದಾನವನ್ನು ಸಹ ಸಮರ್ಪಕವಾಗಿ ವಿನಿಯೋಗಿಸದೆ ಅನ್ಯಾಯ ಮಾಡುತ್ತಿದೆ ಎಂದ ಅವರು, ಇಂಥ ಬೇಜವಾಬ್ದಾರಿ ಸರ್ಕಾರಕ್ಕೆ ಉಪ ಚುನಾವಣೆಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಪಾಠ ಕಲಿಸುವ ಕಾಲ ಬಂದಿದೆ ಎಂದರು.