ನಂಜನಗೂಡು: ನಂಜನಗೂಡು ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿರವರ ಪರ ಮತಯಾಚಿಸಲು ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಗ್ರಾಮಸ್ಥರು ಗ್ರಾಮದ ಸಮಸ್ಯೆಗಳ ಸುರಿಮಳೆಗೈದರು.
ನಂಜನಗೂಡು ತಾಲೂಕು ಹೊಸೂರು ಗ್ರಾಮದ ಗ್ರಾಮಸ್ಥರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಅಭ್ಯರ್ಥಿ ಕಳಲೆ ಕೇಶವಮೂರ್ತಿರವರ ಪರ ಮತಯಾಚಿಸಲು ಗ್ರಾಮಕ್ಕೆ ಆಗಮಿಸಿದ ಸಂದರ್ಭ ಗ್ರಾಮಸ್ಥರು, ಕುಡಿಯುವ ನೀರು, ರಸ್ತೆ, ಚರಂಡಿ, ಮುಂತಾದ ಸಮಸ್ಯೆಗಳ ಮನವಿ ಪತ್ರಗಳನ್ನು ಮುಖ್ಯಮಂತ್ರಿಗಳಿಗೆ ನೀಡಿ ತಮ್ಮ ಅಳಲನ್ನು ತೋಡಿಕೊಂಡರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯರವರು ಹಿಂದೆ ಇದ್ದಂತಹ ಶಾಸಕರು ಈ ಎಲ್ಲ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿತ್ತು, ಆದರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಈಗ ಆ ಸ್ಥಾನಕ್ಕೆ ಚುನಾವಣೆಯ ನಡೆಯುತ್ತಿದ್ದು, ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಕಳಲೆ ಕೇಶವಮೂರ್ತಿಯವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ದಿಗೆ ಸಹಕರಿಸಿ ಎನ್ನುವ ಮೂಲಕ ಮತ ಯಾಚನೆ ಮಾಡಿದರು.
ಮುಂದುವರೆದು ಮಾತನಾಡಿ ಈಗಾಗಲೇ ನಿಮ್ಮ ಗ್ರಾಮವೂ ಸೇರಿದಂತೆ ನಂಜನಗೂಡು ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳ ರಸ್ತೆ, ಚರಂಡಿ, ಕುಡಿಯುವ ನೀರಿನ ವ್ಯವಸ್ಥೆಗೆ ಸುಮಾರು 500 ಕೋಟಿ ರೂ. ಗೂ ಹೆಚ್ಚು ಹಣ ಬಿಡುಗಡೆ ಮಾಡಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.