ಮಡಿಕೇರಿ: ಪರಿಶಿಷ್ಟರು ಆಧಾರ್ ಕಾರ್ಡ್, ನರೇಗಾದಡಿ ಜಾಬ್ ಕಾರ್ಡ್, ಬ್ಯಾಂಕ್ ಖಾತೆ ತೆರೆಯುವುದು ಹಾಗೂ ವಿವಿಧ ಪ್ರಮಾಣ ಪತ್ರಗಳನ್ನು ಪಡೆಯುವಂತಾಗಲು ಗ್ರಾಮ ಮತ್ತು ಹೋಬಳಿ ಮಟ್ಟದಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸುವಂತೆ ಸಮಾಜ ಕಲ್ಯಾಣ ಹಾಗೂ ಸಮಗ್ರ ಗಿರಿಜನ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳ ಕಾರ್ಯಕ್ರಮ ಪ್ರಗತಿ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಾಜ ಕಲ್ಯಾಣ ಹಾಗೂ ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಕಲ್ಯಾಣ ಕಾರ್ಯಕ್ರಮಗಳನ್ನು ಬಡವರಿಗೆ ತಲುಪಿಸಬೇಕು. ಆ ನಿಟ್ಟಿನಲ್ಲಿ ಪರಿಶಿಷ್ಟರು ಸರ್ಕಾರದ ಸೌಲಭ್ಯಗಳನ್ನು ಅರ್ಹರು ಪಡೆಯುವಂತಾಗಲು ಮಾಹಿತಿ ನೀಡುವ ಮತ್ತು ಸೌಲಭ್ಯ ಕಲ್ಪಿಸುವ ವಿಶೇಷ ಶಿಬಿರ ಏರ್ಪಡಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಪ್ರತೀ ತಿಂಗಳ ಮೂರನೇ ವಾರ ಸಭೆ ಆಹ್ವಾನಿಸಬೇಕು. ಪ್ರಗತಿ ಸಂಬಂಧಿಸಿದಂತೆ ಕಾಲ ಕಾಲಕ್ಕೆ ಮಾಹಿತಿ ಒದಗಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಗಳ ಕಾರ್ಯಕ್ರಮ ಅನುಷ್ಠಾನ ಪ್ರಗತಿ ಸಂಬಂಧ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಯೋಜನೆಯಡಿ ಮಿಸಲಿಟ್ಟ ಅನುದಾನ ಅರ್ಹರಿಗೆ ತಲುಪಿಸಬೇಕು. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಾಜ ಕಲ್ಯಾಣ ಹಾಗೂ ಐಟಿಡಿಪಿ ಇಲಾಖೆಗಳ ಅಧಿಕಾರಿಗಳು ಬ್ಯಾಂಕರ್ಸ್ ಗಳ ಸಭೆಗೆ ಹಾಜರಾಗಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಜಿಲ್ಲಾ ವಲಯದಲ್ಲಿ ನಿಗದಿತ ಹಣ ಮೀಸಲಿಟ್ಟು, ಕಾಲ ಕಾಲಕ್ಕೆ ವಿನಿಯೋಗ ಮಾಡಬೇಕು. ಈ ಸಂಬಂದ ಅಗತ್ಯ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿ.ಪಂ.ಸಿಇಓ ಚಾರುಲತಾ ಸೋಮಲ್ ಅವರು ಮಾತನಾಡಿ ಪರಿಶಿಷ್ಟರಿಗಾಗಿ ಮೀಸಲಿಟ್ಟಿರುವ ಅನುದಾನವನ್ನು ಅರ್ಹರಿಗೆ ತಲುಪಿಸಬೇಕು. ಆ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮಾಯಾದೇವಿ ಗಲಗಲಿ, ಐಟಿಡಿಪಿ ಇಲಾಖೆ ಅಧಿಕಾರಿ ಪ್ರಕಾಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್.ಶ್ರೀರಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಮಮ್ತಾಜ್, ಜಿ.ಪಂ.ಎಂಜಿನಿಯರ್ ರಾಜ್ಕುಮಾರ್ ರೆಡ್ಡಿ, ಪ್ರಾದೇಶಿಕ ಸಾರಿಗೆ ಕಚೇರಿಯ ವ್ಯವಸ್ಥಾಪಕರಾದ ಶಿವಣ್ಣ, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ್, ಕೃಷಿ ಇಲಾಖೆಯ ತಾಂತ್ರಿಕ ಸಹಾಯಕರಾದ ರಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ಅಧಿಕಾರಿ ರಾಜಶೇಖರ್, ರೇವಣ್ಣ, ವೈದ್ಯಕೀಯ ಕಾಲೇಜಿನ ಮೇರಿ ನಾಣಯ್ಯ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಚೆನ್ನಬಸವಯ್ಯ, ತಹಶೀಲ್ದಾರ್ಗಳಾದ ಕುಸುಮ, ತಾ.ಪಂ. ಇಒ ಪಡ್ನೇಕರ್, ಜೀವನ್ ಕುಮಾರ್ ಇತರರು ತಮ್ಮ ಇಲಾಖಾ ವ್ಯಾಪ್ತಿಯ ಪ್ರಗತಿ ಬಗ್ಗೆ ಮಾಹಿತಿ ನೀಡಿದರು.