ಮಂಡ್ಯ: ಜಲಾಶಯ ಭರ್ತಿಯಾಗುವ ಮುನ್ನವೇ ಕೃಷ್ಣರಾಜ ಸಾಗರ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುತ್ತಿರುವ ಕ್ರಮವನ್ನು ಖಂಡಿಸಿ ರೈತರು ಮಂಡ್ಯ ಜಿಲ್ಲೆಯಾದ್ಯಂತ ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.
ಭಾನುವಾರವೂ ಪ್ರತಿಭಟನೆ ನಡೆಸಿದ ರೈತ ಸಂಘದ ಸದಸ್ಯರು, ವಿವಿಧ ಸಂಘಟನೆಯ ಕಾರ್ಯಕರ್ತರು, ಗ್ರಾಮಸ್ಥರು ಹೆದ್ದಾರಿ ತಡೆದು ರಾಜ್ಯ ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮದ್ದೂರು ತಾಲೂಕಿನ ಗೆಜ್ಜಲಗೆರೆ ಮತ್ತು ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮದಲ್ಲಿ ಪ್ರತಿಭಟನೆ ನಡೆಸಿ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ಸ್ಥಗಿತಗೊಳಿಸಿ ರೈತರ ಕೃಷಿ ಬೆಳೆಗಳಿಗಾಗಿ ವಿ.ನಾಲೆಗಳಿಗೆ ನೀರು ಹರಿಸಿ ಎಂದು ಆಗ್ರಹಿಸಿ ಹೆದ್ದಾರಿಯಲ್ಲೇ ಧರಣಿ ನಡೆಸಿದರು. ರೈತರು ರಸ್ತೆಯಲ್ಲೇ ಧರಣಿ ನಡೆಸಿದ್ದರಿಂದ ಸಂಚಾರಕ್ಕೆ ಅಡಚಣೆಯಾಗಿತ್ತು. ಆ ನಂತರ ಪೊಲೀಸರು ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇಂಡುವಾಳಿನಲ್ಲಿ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ 70ಕ್ಕೂ ಹೆಚ್ಚು ರೈತರು ದಿಢೀರ್ ರಸ್ತೆ ತಡೆ ನಡೆಸಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಈಗಾಗಲೇ ಜಲಾಶಯ ಭರ್ತಿಯಾಗದೆ ರೈತರಿಗೆ ಕೃಷಿಗೆ ನೀರು ಹರಿಸುತ್ತಿಲ್ಲ. ಹೀಗಿರುವಾಗ ಸ್ಥಳೀಯ ರೈತರ ಹಿತಾಸಕ್ತಿ ಮರೆತು ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಮೂರು ವರ್ಷಗಳಿಂದ ಭೀಕರ ಬರವನ್ನು ಜಿಲ್ಲೆಯ ರೈತರು ಎದುರಿಸುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿಯೂ ತಮಿಳುನಾಡಿಗೆ ನೀರು ಹರಿಸುತ್ತಿರುವುದೇಕೆ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ ರೈತರ ಬಗ್ಗೆ ಇದೇ ರೀತಿಯ ಧೋರಣೆ ಅನುಸರಿಸುತ್ತಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.