ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ, ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿದೆ ಎಂದು ಕೊಡಗು ಪ್ರಕೃತಿ ವಿಕೋಪ ಪರಿಹಾರ ಹೋರಾಟ ಸಮಿತಿ ಆರೋಪಿಸಿದೆ.
ಪ್ರಕೃತಿ ವಿಕೋಪ ಹಾನಿಗೆ ಪರಿಹಾರವಾಗಿ ಕೇಂದ್ರ ಸರಕಾರ ಬಿಡುಗಡೆ ಮಾಡಿರುವ 546.21 ಕೋಟಿ ರೂ. ಅನುದಾನದಲ್ಲಿ ಶೇ.80ರಷ್ಟು ಮೊತ್ತವನ್ನು ಕೊಡಗಿಗೆ ಬಿಡುಗಡೆ ಮಾಡಬೇಕು ಎಂದು ಸಮಿತಿ ರಾಜ್ಯ ಸರಕಾರವನ್ನು ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಎಂ.ಬಿ.ದೇವಯ್ಯ ಅವರು, ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿ ಮೂರು ತಿಂಗಳುಗಳು ಕಳೆದಿವೆ. ಆರಂಭದಲ್ಲಿ ಜನಪ್ರತಿನಿಧಿಗಳು, ಜಿಲ್ಲಾಡಳಿತ ಸಂತ್ರಸ್ತರ ನೆರವಿಗಾಗಿ ಸಾಕಷ್ಟು ಕಾಳಜಿ ವಹಿಸಿದ್ದು, ಇದಕ್ಕಾಗಿ ಅವರುಗಳಿಗೆ ಅಭಿನಂದನೆ ಸಲ್ಲಿಸಲಾಗುವುದು. ಆದರೆ ಇತ್ತೀಚಿನ ದಿನಗಳಲ್ಲಿ ಸಂತ್ರಸ್ತರಿಗೆ ವಿತರಿಸುವುದಕ್ಕಾಗಿ ಮಾದರಿ ಮನೆಗಳನ್ನು ನಿರ್ಮಿಸಿ ಪ್ರದರ್ಶನಕ್ಕಿಟ್ಟಿರುವುದು ಹೊರತುಪಡಿಸಿದರೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಪ್ರಗತಿ ಕಂಡು ಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಇನ್ನು ನಾಲ್ಕು ತಿಂಗಳುಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ಆ ಬಳಿಕ ಕೊಡಗಿನಲ್ಲಿ ಮನೆ ಮಾತ್ರವಲ್ಲ, ಗುಡಿಸಲು ನಿರ್ಮಿಸುವುದಕ್ಕೂ ಸಾಧ್ಯವಾಗುವುದಿಲ್ಲ. ಆದ್ದರಿಂದ ನಿರಾಶ್ರಿತರಿಗೆ ಪರಿಹಾರ ಕಲ್ಪಿಸುವಲ್ಲಿ ಜಿಲ್ಲಾಡಳಿತ, ಸರಕಾರ ಹಾಗೂ ಜನಪ್ರತಿನಿಧಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂಬಂಧವಾಗಿ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಒಂದು ವಾರದ ಗಡುವು ನೀಡಲಾಗುವುದು. ಅದಕ್ಕೂ ಸ್ಪಂದನ ದೊರಕದಿದ್ದಲ್ಲಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು. ಪಕ್ಷಾತೀತ ಮತ್ತು ಜಾತ್ಯತೀತವಾದ ಈ ಸಮಿತಿಯ ಹೋರಾಟ ನಿರಾಶ್ರಿತರು ತಮ್ಮ ಹಿಂದಿನ ಸ್ಥಿತಿಯನ್ನು ಕಂಡುಕೊಳ್ಳುವವರೆಗೂ ಮುಂದುವರಿಯಲಿದೆ ಎಂದು ಹೇಳಿದರು.
ಕೇಂದ್ರ ಸರಕಾರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ರಾಜ್ಯಕ್ಕೆ 546.21 ಕೋಟಿ ರೂ.ಗಳ ನೆರವನ್ನು ಘೋಷಿಸಿದೆ. ರಾಜ್ಯದ ಇತರೆಡೆಗಳಿಗಿಂತ ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿರುವುದರಿಂದ ಆ ಮೊತ್ತದ ಶೇ.80ರಷ್ಟು ಹಣವನ್ನು ಕೊಡಗಿನ ನಿರಾಶ್ರಿತರ ಪುನರ್ವಸತಿ ಹಾಗೂ ಇತರ ಅಭಿವೃದ್ಧಿ ಕಾರ್ಯಗಳಿಗೆ ಒದಗಿಸುವಂತಾಗಬೇಕು ಎಂದರು.