ಮಡಿಕೇರಿ: ಮಡಿಕೇರಿ ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮಿತಿ ಮೀರಿದ್ದು, ಶಾಶ್ವತ ಪರಿಹಾರ ಸೂಚಿಸುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾಗಿದೆ ಎಂದು ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾವೇರಿ ನಾಡಿನಲ್ಲೇ ಕುಡಿಯುವ ನೀರಿಗೆ ಬರ ಬಂದಿರುವ ಬಗ್ಗೆ ಸರ್ಕಾರದ ಗಮನ ಸೆಳೆದು ಸೂಕ್ತ ಕ್ರಮಕ್ಕಾಗಿ ಒತ್ತಡ ಹೇರುವ ಕುರಿತು ಸಭೆ ನಿರ್ಣಯ ಕೈಗೊಂಡಿತು.
ನಗರದ ತಾ.ಪಂ ಸಭಾಂಗಣದಲ್ಲಿ ಅಧ್ಯಕ್ಷೆ ತೆಕ್ಕಡ ಶೋಭಾ ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಹುತೇಕ ಸದಸ್ಯರು ಗ್ರಾಮಗಳನ್ನು ಮೂಲಭೂತ ಸಮಸ್ಯೆಗಳು ಕಾಡುತ್ತಿರುವ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿದರು.
ಸದಸ್ಯ ನಾಗೇಶ್ ಕುಂದಲ್ಪಾಡಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಗ್ರಾಮೀಣ ಭಾಗವನ್ನು ಅತಿಯಾಗಿ ಕಾಡುತ್ತಿದ್ದರೂ ಯಾವುದೇ ಪರಿಹಾರ ಸೂಚಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಸಮಸ್ಯೆಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲವೆಂದು ಆರೋಪಿಸಿದರು.
ಕುಡಿಯುವ ನೀರು ಸೇರಿದಂತೆ ಜಿಲ್ಲೆಯನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ನೇರವಾಗಿ ಮುಖ್ಯಮಂತ್ರಿಗಳ ಗಮನ ಸೆಳೆಯುವುದು ಸೂಕ್ತವೆಂದು ಅವರು ಸಲಹೆ ನೀಡಿದರು.
ಈ ಸಂದರ್ಭ ಮಾತನಾಡಿದ ಅಧ್ಯಕ್ಷೆ ಶೋಭಾ ಮೋಹನ್ ಈಗಾಗಲೇ ಉಸ್ತುವಾರಿ ಸಚಿವರ ಗಮನ ಸೆಳೆಯಲಾಗಿದೆ, ಆದರೆ ಯಾವುದೇ ಸ್ಪಂದನೆ ದೊರಕಿಲ್ಲವೆಂದು ಟೀಕಿಸಿದರು. ಮತ್ತೊಮ್ಮೆ ಮನವಿ ನೀಡುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಗ್ರಾ.ಪಂ ಪಿಡಿಒಗಳು ಅಂಗನವಾಡಿ, ಸರ್ಕಾರಿ ಶಾಲೆ ಮತ್ತು ವಿವಿಧ ಕಾಮಗಾರಿಗಳ ಬಗ್ಗೆ ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿದ ಅವರು ಸ್ಥಳ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು.
ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಲಕ್ಷ್ಮೀ ಮಾತನಾಡಿ ಸರ್ಕಾರದ ನಿಯಮದಂತೆ ಈಗಾಗಲೇ ಪಿಡಿಓ ಅವರನ್ನು ಅಂಗವಾಡಿ ಸೇರಿದಂತೆ ಸರ್ಕಾರಿ ಇಲಾಖೆಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸುವಂತೆ ತಿಳಿಸಲಾಗಿದ್ದು, ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ ಎಂದರು.