ಮಡಿಕೇರಿ: ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ದೊರೆತ ಹಿನ್ನೆಲೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಸಂಭ್ರಮಾಚರಿಸಿತು.
ನಗರದ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಒಳಿತಿಗಾಗಿ ಪ್ರಾರ್ಥಿಸಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಾಗೂ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವ ಮೂಲಕ ಜನಪ್ರಿಯ ಪಕ್ಷವೆನಿಸಿಕೊಂಡ ಕಾಂಗ್ರೆಸ್‍ನ್ನು ನೇರವಾಗಿ ಎದುರಿಸಲಾಗದ ಬಿಜೆಪಿ ಆಡಳಿತ ಯಂತ್ರವನ್ನು ಬಳಸಿಕೊಂಡು ಕುತಂತ್ರ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು. ಐಟಿ, ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ ಅಧಿಕಾರಕ್ಕಾಗಿ ಯಾವ ಮಾರ್ಗವನ್ನು ಬೇಕಾದರೂ ಅನುಸರಿಸಲು ಸಿದ್ಧವಿದೆ ಎಂದು ಟೀಕಿಸಿದರು.
ಕಾಂಗ್ರೆಸ್‍ನ ಬಲಿಷ್ಠ ನಾಯಕ ಡಿ.ಕೆ.ಶಿವಕುಮಾರ್ ಅವರು ಉಪ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳದಂತೆ ತಡೆಯಲು ಷಡ್ಯಂತ್ರವನ್ನು ರೂಪಿಸಲಾಗಿತ್ತು. ಆದರೆ ನ್ಯಾಯಾಂಗ ವ್ಯವಸ್ಥೆ ನ್ಯಾಯದ ಪರವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಮಂಜುನಾಥ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ವೆಂಕಪ್ಪಗೌಡ ಮಾತನಾಡಿ, ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ವಿನಾಕಾರಣ ಬಂಧಿಸಲಾಗಿದೆ.
ನ್ಯಾಯಾಲಯ ಜಾಮೀನು ನೀಡಿದ್ದರೂ ಮತ್ತೆ ಬಂಧನಕ್ಕೆ ಒಳಪಡಿಸುವ ಕುತಂತ್ರ ಬಿಜೆಪಿಯಿಂದ ನಡೆಯುತ್ತಿದೆ ಎಂದು ಆರೋಪಿಸಿದರು. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ರಾಜ್ಯ ಬಿಜೆಪಿ ಸರಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದರು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ಟಿ.ಎಂ.ಶಾಹಿದ್, ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಗೀತಾ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ನಗರ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಯೋಜಕ ತೆನ್ನಿರಮೈನಾ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್, ಪ್ರಮುಖರಾದ ಕಾವೇರಮ್ಮ ಸೋಮಣ್ಣ, ಪ್ರಕಾಶ್ ಆಚಾರ್ಯ, ನೆರವಂಡ ಉಮೇಶ್, ಸದಾ ಮುದ್ದಪ್ಪ, ಉದಯ ಕುಮಾರ್, ಕಾನೆಹಿತ್ಲು ಮೊಣ್ಣಪ್ಪ, ಜಪ್ರುಲ್ಲ, ಮುದ್ದುರಾಜ್, ಸ್ವರ್ಣಲತಾ ಹಾಗೂ ಕಾರ್ಯಕರ್ತರು ಹಾಜರಿದ್ದರು.