ಮಡಿಕೇರಿ: ನಗರದ ಹೊರ ವಲಯದಲ್ಲಿ 35 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಜಿಲ್ಲಾ ಪಂಚಾಯಿತಿ ನೂತನ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ರಾಜ್ಯ ಹಾಗೂ ಜಿಲ್ಲೆಯಲ್ಲಿ ನೆರೆಯಿಂದಾಗಿ ಕೃಷಿ ಸೇರಿದಂತೆ ಇತರೆ ಬೆಳೆ ನಷ್ಟವಾಗಿದ್ದು, ಬೆಳೆ ಪರಿಹಾರವನ್ನು ಎಂಟು ಹತ್ತು ದಿನದಲ್ಲಿ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಅವರು ತಿಳಿಸಿದರು.
ಕಳೆದ ಬಾರಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಮನೆ ಕಳೆದುಕೊಂಡವರಿಗೆ ಈಗಾಗಲೇ ಕರ್ಣಂಗೇರಿಯಲ್ಲಿನ 35 ಮನೆ ಹಸ್ತಾಂತರಿಸಲಾಗಿದೆ. ಉಳಿದ ಮನೆಗಳನ್ನು ಮಾರ್ಚ್ ಅಂತ್ಯದೊಳಗೆ ಹಸ್ತಾಂತರಿಸಲಾಗುವುದು. ಹಾಗೆಯೇ ಈ ಬಾರಿ ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿಕೊಡಲಾಗುವುದು ಎಂದು ಅವರು ಹೇಳಿದರು.
ಸರ್ಕಾರ ನೆರೆ ಸಂತ್ರಸ್ತರ ನೋವನ್ನು ಅರ್ಥಮಾಡಿಕೊಂಡಿದೆ. ಸಂತ್ರಸ್ತರ ಭವಣೆ ನಿವಾರಿಸಲು ಅಗತ್ಯ ಕ್ರಮಕೈಗೊಂಡಿದೆ ಎಂದರು.
ಜಿಲ್ಲೆಯಲ್ಲಿನ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ಭರಿಸಲಾಗುವುದು. ಈ ಬಾರಿ ಪ್ರಕೃತಿ ವಿಕೋಪದಿಂದ ವಿವಿಧ ಮಾದರಿಯಲ್ಲಿ ಮನೆ ಕಳೆದುಕೊಂಡವರಿಗೆ ಹಣ ಬಿಡುಗಡೆ ಮಾಡಲಾಗಿದೆ. ಜೊತೆಗೆ ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ಬಾಡಿಗೆ ಭರಿಸಲಾಗುತ್ತಿದೆ ಎಂದು ಅವರು ಹೇಳಿದರು.
ಸಂತ್ರಸ್ತರಿಗೆ ಸಮರ್ಪಕವಾಗಿ ಸವಲತ್ತುಗಳನ್ನು ತಲುಪಿಸಲಾಗುವುದು. ಸಾಮಾನ್ಯ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು. ಜನರ ಜೊತೆ ಸರ್ಕಾರ ಸದಾ ಸ್ಪಂದಿಸಲಿದೆ. ಈ ಬಾರಿ ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಎರಡು ಕಡೆ ಜಾಗ ಗುರುತಿಸಲಾಗಿದ್ದು, ಮಳೆ ನಿಂತ ನಂತರ ಶಾಶ್ವತ ಕಾರ್ಯ ಕೈಗೊಳ್ಳಲಾಗುವುದು ಎಂದು ಸಚಿವರು ನುಡಿದರು.