ಮಡಿಕೇರಿ: ಶ್ರೀಮಂತ ಪರಂಪರೆಯನ್ನು ಹೊಂದಿರುವ ಕನ್ನಡ ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿ, ಸಾಹಿತ್ಯವನ್ನು ರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ
ನಗರದ ಕೋಟೆ ಆವರಣದಲ್ಲಿ ಶುಕ್ರವಾರ ನಡೆದ 64ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿಗಳು ರಾಜ್ಯೋತ್ಸವದ ಸಂದೇಶ ನೀಡಿದರು. ಕರುನಾಡ ಜನರ ಮನಸ್ಸಿನಲ್ಲಿ ಕನ್ನಡ ಅಭಿಮಾನದ ಬೀಜ ಬಿತ್ತುವುದರ ಮೂಲಕ ಕನ್ನಡ ನಾಡಿನ ಗರಿಮೆಯನ್ನು ಮತ್ತಷ್ಟು ಉತ್ತುಂಗಕ್ಕೇರಿಸಲು ಎಲ್ಲಾ ಕನ್ನಡಿಗರು ಪ್ರಯತ್ನಿಸಬೇಕಾಗಿದೆ ಎಂದು ಹೇಳಿದರು.
ಸ್ವಾತಂತ್ರ್ಯ ಪೂರ್ವದಲ್ಲಿ ವಿವಿಧ ಕಾರಣಗಳಿಂದ ಹರಿದು ಹಂಚಿ ಹೋಗಿದ್ದ ಪ್ರದೇಶಗಳನ್ನು ಭಾಷಾ ಪುನರ್‍ವಿಂಗಡಣೆಯ ಆಧಾರದ ಮೇಲೆ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ 1956ರ ನ.1ರಂದು ಮೈಸೂರು ರಾಜ್ಯವನ್ನು ಅಸ್ತಿತ್ವಕ್ಕೆ ತರಲಾಯಿತು. ವಿವಿಧ ಪ್ರಾಂತ್ಯಗಳಲ್ಲಿ ಹಂಚಿಹೋಗಿದ್ದ ಕನ್ನಡಿಗರಿರುವ ಪ್ರದೇಶಗಳನ್ನು ಒಗ್ಗೂಡಿಸುವಲ್ಲೂ ಇದು ತಕ್ಕ ಮಟ್ಟಿಗೆ ಯಶಸ್ವಿಯಾಯಿತು. ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂಬ ಹೆಸರನ್ನು ಇಡುವಂತೆ ಕನ್ನಡದ ಕವಿಗಳಾದ ಕುವೆಂಪು, ಬೇಂದ್ರೆ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಬಿ.ಎಂ.ಶ್ರೀಕಂಠಯ್ಯ ಮುಂತಾದವರು ಆ ಸಂದರ್ಭ ಒತ್ತಿಹೇಳಿದ್ದರು. ಅದರ ಪರಿಣಾಮವಾಗಿ 1973ರ ನ.1ರಂದು ಅಂದಿನ ಮುಖ್ಯಮಂತ್ರಿಗಳಾಗಿದ್ದ ಡಿ.ದೇವರಾಜ ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದರು ಎಂದು ಅನೀಸ್ ಕಣ್ಮಣಿ ಜಾಯ್ ಸ್ಮರಿಸಿದರು.
ಕನ್ನಡದ ಮಣ್ಣಿಗೆ, ನುಡಿಗೊಂಡು ಸೊಗಸಿದೆ. ಸೌಂದರ್ಯವಿದೆ. ಬೆಡಗಿದೆ. ಆದ್ದರಿಂದ ಪ್ರಾದೇಶಿಕ ಸಂಸ್ಕøತಿಯನ್ನು ಎತ್ತಿ ಹಿಡಿಯುವ ಕಾರ್ಯವನ್ನು ನಾವು ಮಾಡಬೇಕಾಗಿದೆ ಎಂದು ಹೇಳಿದ ಅವರು, ಕನ್ನಡ ನಾಡು ನುಡಿಗೆ 2ಸಾವಿರ ವರ್ಷಗಳ ಇತಿಹಾಸವಿದ್ದು, ಈ ಭಾಷೆಯನ್ನಾಡುವ ಜನರು ಎರಡು ಸಾವಿರ ವರ್ಷಗಳ ಹಿಂದೆಯೇ ಇದ್ದರು ಎಂಬುದಕ್ಕೆ ಇತಿಹಾಸದಲ್ಲಿ ಸಾಕಷ್ಟು ಉಲ್ಲೇಖಗಳಿವೆ ಎಂದೂ ಹೇಳಿದರು.
ಸಮಾರಂಭಕ್ಕೂ ಮುನ್ನ ರಾಷ್ಟ್ರ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿಗಳು ಪೊಲೀಸ್, ಎನ್‍ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಸೇವಾದಳ, ಗೃಹರಕ್ಷಕ ದಳಗಳ ಪಥವೀಕ್ಷಣೆ ನಡೆಸಿ ಗೌರವವಂದನೆ ಸ್ವೀಕರಿಸಿದರು.
ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಡಿಕೇರಿ ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪೆನ್ನೇಕರ್, ಅಪರ ಜಿಲ್ಲಾಧಿಕಾರಿ ಸ್ನೇಹಾ, ಉಪ ವಿಭಾಗಾಧಿಕಾರಿ ಜವರೇಗೌಡ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು, ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಮತ್ತಿತರರು ಹಾಜರಿದ್ದರು.