ಮಡಿಕೇರಿ: ಅರಣ್ಯ ಹಕ್ಕು ಕಾಯ್ದೆಯಡಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ.
ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅರಣ್ಯ ಹಕ್ಕು ಕಾಯ್ದೆಯಡಿ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಉಪ ವಿಭಾಗ ಮಟ್ಟದಲ್ಲಿ ಸಭೆ ನಡೆಸಿ ಜಿಲ್ಲಾ ಮಟ್ಟಕ್ಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಈ ಬಗ್ಗೆ ಗಮನ ಸೆಳೆದ ಸಮಿತಿ ಸದಸ್ಯರಾದ ಕೆ.ಪಳನಿ ಪ್ರಕಾಶ್ ಅವರು ಅರಣ್ಯ ಹಕ್ಕು ಕಾಯ್ದೆಯನ್ನು ಮೂಲ ನಿವಾಸಿ ಗಿರಿಜನರಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಮನವಿ ಮಾಡಿದರು.
ತಟ್ಟೆಕೆರೆ ಹಾಡಿಯಲ್ಲಿ ಗಿರಿಜನರಿಗೆ ಮೂಲ ಸೌಲಭ್ಯ ಕಲ್ಪಿಸಲು ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ಮುತ್ತಪ್ಪ ಅವರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಪರಿಶಿಷ್ಟ ಕುಟುಂಬಗಳು ಮನೆ, ಮಠ ಕಳೆದುಕೊಂಡಿದ್ದು, ಅಂತವರಿಗೆ ಪ್ರಕೃತಿ ವಿಕೋಪದಡಿ ಅಗತ್ಯಮೂಲ ಸೌಲಭ್ಯ ಕಲ್ಪಿಸಬೇಕಿದೆ ಎಂದು ಮನವಿ ಮಾಡಿದರು.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಅವರು ಮಳೆಯಿಂದ ಹಾನಿಯಾದ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ಪರಿಹಾರ ವಿತರಿಸಲಾಗಿದೆ. ಕುಟುಂಬದ ಹೆಸರು ಬಿಟ್ಟು ಹೋಗಿದ್ದಲ್ಲಿ ಮಾಹಿತಿ ಒದಗಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.