ಮದ್ದೂರು: ಡಾ.ಬಿ.ಆರ್.ಅಂಬೇಡ್ಕರ್ ವಿರೋಧಿ, ಸಂವಿಧಾನ ವಿರೋಧಿ ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರನ್ನು ವಜಾಗೊಳಿಸಿ, ದೇಶ ದ್ರೋಹ ಪ್ರಕರಣ ದಾಖಲಿಸಿ, ಶಿಕ್ಷಣ ಸಚಿವರನ್ನು ಹೊಣೆಗಾರನ್ನಾಗಿ ಮಾಡಿ ಸಚಿವ ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಸೋಮವಾರ ಪಟ್ಟಣದ ಬೆಂಗಳೂರು ಮೈಸೂರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ಮಾಡಲಾಯಿತು.
ಪಟ್ಟಣದ ತಾಲೂಕು ಕಚೇರಿಯ ಮುಂದಿರುವ ಹೆದ್ದಾರಿಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರ ಪ್ರತಿಕೃತಿ ಸುಟ್ಟು ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಸಂಚಾರ ತಡೆದ ಕಾರಣ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಪಂ ಮಾಜಿ ಅಧ್ಯಕ್ಷ ಕಂಠಿ ಸುರೇಶ್ ಮಾತನಾಡಿ, ಭಾರತವು ಪ್ರಪಂಚದಲ್ಲಿ ಅತಿ ದೊಡ್ಡದಾದ ಪ್ರಜಾಪ್ರಭುತ್ವ ಜಾತ್ಯಾತೀತ ರಾಷ್ಟ್ರವಾಗಲು ಕಾರಣವಾಗಿರುವ ಸಂವಿಧಾನದ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗೆ ಮನುವಾದಿಗಳು ಹಾಗೂ ಬಿಜೆಪಿ ಮತ್ತು ಸಂಘ.ಪರಿವಾರದವರು ಅಂಬೇಡ್ಕರ್ ಅವರ ಅವರಿಗೆ ಅವಮಾನ ಮಾಡುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪಟ್ಟಣದ ಶ್ರೀ ಉಗ್ರನರಸಿಂಹಸ್ವಾಮಿ ದೇಗುಲದ ಆವರಣದಲ್ಲಿ ಸಂಘಟನೆಗಳ ಕಾರ್ಯಕರ್ತರು ತಮಟೆ ಬಾರಿಸುವ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿ ತಾಲೂಕು ಕಚೇರಿಗೆ ಆಗಮಿಸಿದರು.