ಮದ್ದೂರು: ತಾಲೂಕಿನ ನಗರಕೆರೆ ಗ್ರಾಮದಲ್ಲಿ ರಸ್ತೆ ಒತ್ತುವರಿಯಾಗಿರುವ ಸ್ಥಳವನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ಮಾಡಿದರು.
ರಸ್ತೆಯ ಒತ್ತುವರಿ ಮಾಡಿಕೊಂಡಿರುವ ವ್ಯಕ್ತಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಈ ಕೂಡಲೇ ರಸ್ತೆ ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯ ಮಾಡಿದರು.
ಗ್ರಾಮದ ಯಜಮಾನ ಶಿವರಾಜು ಮಾತನಾಡಿ, ಅಂದಾಜು ನಾಲ್ಕೂವರೆ ವರ್ಷಗಳಿಂದ ಗ್ರಾಮದ ಪ್ರಭಾವಿ ವ್ಯಕ್ತಿಯೊಬ್ಬರು ಗ್ರಾಮದ ದೇವರ ಮೆರವಣಿಗೆ ಮಾಡುವ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಗ್ರಾಮದಲ್ಲಿ ಸಂಚಾರ ಮಾಡಲು ತುಂಬಾ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ತೆರವು ಮಾಡದ ಕಾರಣ ಗ್ರಾಮದಲ್ಲಿ ಹಬ್ಬ ಆಚರಣೆ ಮಾಡುತ್ತಿಲ್ಲ. ಇದರಿಂದ ಗ್ರಾಮದಲ್ಲಿ ರೋಗ, ರುಜೀನಗಳು ಹರಡುತ್ತಿದೆ ಜತೆಗೆ ಗ್ರಾಮದಲ್ಲಿ ಅಶಾಂತಿ ನೆಲಸುತ್ತಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾನೂನು ಪ್ರಕಾರ ರಸ್ತೆ ತೆರವುಗೊಳಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸ್ಥಳಕ್ಕೆ ಆಗಮಿಸಿದ ತಾಪಂ ಇಒ ಮುನಿರಾಜು ಮನವಿ ಸ್ವೀಕರಿಸುವ ಸಂದರ್ಭದಲ್ಲಿ ಇಒ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು. ಶೀಘ್ರವಾಗಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.