ಚಾಮರಾಜನಗರ: ಪಶುವೈದ್ಯ ಪ್ರಿಯಾಂಕ ರೆಡ್ಡಿ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ತೆಲಂಗಾಣ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ರಾಷ್ಟ್ರೀಯ ಹೆದ್ಧಾರಿ 209ನ್ನು ಕೆಲಕಾಲ ತಡೆದು ಪ್ರತಿಭಟನೆ ನಡೆಸಿ, ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ತೆಲಂಗಾಣ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಹಿಂದೂ ಸಂಘಟನೆಗಳ ಅಧ್ಯಕ್ಷ ಮಹೇಂದ್ರ, ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ತಮ್ಮ ಕರ್ತವ್ಯ ನಿರ್ವಹಿಸಿ ಬರುವ ಸಂದರ್ಭದಲ್ಲಿ ಕಿಡಿಗೇಡಿಗಳು ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿರುವುದು ಖಂಡನೀಯ ಅವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.
ಒಬ್ಬ ಜವಾಬ್ದಾರಿಯುತ ಸಚಿವರಾದ ಮೊಹಮ್ಮದ್ ಆಲಿ ಪ್ರಿಯಾಂಕ ರೆಡ್ಡಿಯ ಮೇಲಿನ ಕೃತ್ಯದ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ದೂರಿದರು. ಕೂಡಲೇ ತೆಲಂಗಾಣ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅತ್ಯಾಚಾರ ನಡೆಸಿದ ಕಿಡಿಗೇಡಿಗಳನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.