ಬೆಳಗಾವಿ : ಎಂಇಎಸ್ ಪುಂಡರಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸರಿಪಡಿಸಿ ಸ್ಥಳೀಯರು ಇಂದು ಭಾನುವಾರ ಪುನರ್ ಪ್ರತಿಷ್ಠಾಪಿಸಿದ್ದಾರೆ. ಪುತ್ಥಳಿಗೆ ಹಾಲಿನ ಅಭಿಷೇಕ ಮಾಡಿ ಸ್ಥಳೀಯ ಮತ್ತು ಕನ್ನಡಪರ ಮುಖಂಡರು ಪೂಜೆ ಸಲ್ಲಿಸಲಿದ್ದಾರೆ. ಜೈ ಜೈ ರಾಯಣ್ಣ, ಜೈ ಜೈ ಚೆನ್ನಮ್ಮ ಎಂದು ಘೋಷಣೆ ಕೂಗಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.
ಬೆಳಗಾವಿಯಲ್ಲಿ ಪ್ರತಿಭಟನೆ ಕಿಚ್ಚು ಹೆಚ್ಚಾಗುತ್ತಿದೆ. ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿದ್ದಾರೆ.
ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಗದ್ದಲ ಮತ್ತು ಸಮಾಜದ ಶಾಂತಿಯನ್ನು ಕೆಡಿಸುವ ಕೆಲಸವನ್ನು ಖಂಡಿಸಿ ಕರವೇ ಕಾರ್ಯಕರ್ತರು ಜಿಲ್ಲೆಯಲ್ಲಿ ಮತ್ತು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಿರನವಾಡಿಯಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಪೊಲೀಸರ ಬಂದೋಬಸ್ತ್ ಮಾಡಿದ್ದಾರೆ. ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದನ್ನು ಖಂಡಿಸಿ ಕರವೇ ಕಾರ್ಯಕರ್ತರು ಮೆರವಣಿಗೆ ಹೊರಟಿದ್ದರು. ಈ ವೇಳೆ ಪ್ರತಿಭಟನಾಕಾರನ್ನು ಪೊಲೀಸರು ಪಡೆದರು. ವಶಕ್ಕೆ ಪಡೆಯುವುದನ್ನು ವಿರೋಧಿಸಿದ ಹೋರಾಟಗಾರರು, ಪೊಲೀಸರ ಜತೆ ವಾಗ್ವಾದ ನಡೆಸಿದ್ದಾರೆ. ಲಾಠಿ ಹಿಡಿದು ಪೊಲೀಸರು ಧರಣಿ ನಿರತರನ್ನು ಚದುರಿಸಿದ್ದಾರೆ.
ಬೆಳಗಾವಿಯಲ್ಲಿನ ಎಂಇಎಸ್ ಕಾರ್ಯಕರ್ತರ ಕುಕೃತ್ಯ ಖಂಡಿಸಿ ಕರವೇ ಕಾರ್ಯಕರ್ತರು ಬೆಂಗಳೂರಿನಿಂದ ಬೆಳಗಾವಿ ಚಲೋ ಹಮ್ಮಿಕೊಂಡಿದ್ದಾರೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿಗೆ ಸಾಗಿ ನಾಳೆ ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.