ಬೆಳಗಾವಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಜಾತಿ ಗಣತಿ ವಿವರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಿ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಡಿ.23ರ ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ರಚಿಸಲಾಗಿದ್ದ ಎಚ್.ಕಾಂತರಾಜ್ ಆಯೋಗ ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ. ಆದರೆ, ಈ ಕುರಿತು ಮರು ಪರಿಶೀಲನೆ ನಡೆಸಬೇಕು’’ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು. ವರದಿಯ ವಿವರವನ್ನು ಶೀಘ್ರವೇ ಸಾರ್ವಜನಿಕಗೊಳಿಸಲಾಗುವುದು ಎಂದು ಹೇಳಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆ.ಪಿ.ನಂಜುಂಡಿ, ಕಳೆದ ನಾಲ್ಕು ವರ್ಷಗಳಿಂದ ಸರಕಾರ ಇದನ್ನೇ ಹೇಳುತ್ತಿದೆ. ವರದಿಯ ವಿವರಗಳು ಇನ್ನೂ ಬಹಿರಂಗವಾಗಿಲ್ಲ ಎಂದು ಅವರು ಹೇಳಿದರು.
ಆದಷ್ಟು ಬೇಗ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ವರದಿಯ ವಿವರಗಳನ್ನು ಸಾರ್ವಜನಿಕಗೊಳಿಸುವುದಾಗಿ ಸಚಿವ ಪೂಜಾರಿ ಭರವಸೆ ನೀಡಿದರು.