ಧಾರವಾಡ: ಮಕ್ಕಳನ್ನು ದೇಶದ ಪ್ರಜ್ಞಾವಂತ ನಾಗರಿಕರನ್ನಾಗಿ ಮಾಡೋಣ, ಮಕ್ಕಳಿಗೆ ಆಸ್ತಿ ಮಾಡಬಾರದು. ಮಕ್ಕಳನ್ನೇ ದೇಶದ ಅಸ್ತಿಯನ್ನಾಗಿಸಬೇಕು. ಮಕ್ಕಳ ಕಾರ್ಯ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲಿಕರಣ ಸಚಿವರು ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ಅವರು ಹೇಳಿದರು.
ಇಂದು ಯಾಲಕ್ಕಿ ಶೆಟ್ಟರ್ ಕಾಲೋನಿಯಲ್ಲಿರುವ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಕಚೇರಿ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಸಹಯೋಗದಲ್ಲಿ ನಿರ್ಮಿಸಿರುವ ನೂತನ ಸಭಾಭವನ (ಅಡಿಟೋರಿಯಂ) ಉದ್ಘಾಟನೆ ಮತ್ತು 2019-2020, 2020-2021 ಹಾಗೂ 2021-22ನೇ ಸಾಲಿನ ಅಕಾಡೆಮಿ ಗೌರವ ಪ್ರಶಸ್ತಿ, ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ, ಅಕಾಡೆಮಿ ಬಾಲಗೌರವ ಪ್ರಶಸ್ತಿ ಹಾಗೂ ವಿಶೇಷ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. 2023ರ ರಾಜ್ಯ ಬಜೆಟ್‍ನಲ್ಲಿ ಮಹಿಳೆಯರಿಗಾಗಿ 46,256 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಮಕ್ಕಳನ್ನು ಸ್ವಾವಲಂಬಿಯನ್ನಾಗಿಸೋಣ. ಪ್ರತಿ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸನ್ಮಾನಿಸಿ ಪ್ರಶಸ್ತಿ ನೀಡಬೇಕು. ಮಕ್ಕಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂದರು.
ಸಂಗೀತ, ನೃತ್ಯ, ಕ್ರೀಡೆ, ಚಿತ್ರಕಲೆ, ವಿಜ್ಞಾನ ಕ್ಷೇತ್ರ, ಬರವಣಿಗೆ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಬಹುಮುಖ ಪ್ರತಿಭೆಗಳ ಮಕ್ಕಳಿಗೆ ಅಕಾಡೆಮಿ ಬಾಲಗೌರವ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಮಕ್ಕಳ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಸಾಹಿತಿಗಳಿಗೆ ಹಾಗೂ ಗಣ್ಯ ವ್ಯಕ್ತಿಗಳಿಗೆ ಕೊಡಮಾಡುವ ಅಕಾಡೆಮಿ ಗೌರವ ಪ್ರಶಸ್ತಿ ಮತ್ತು ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿ ನೀಡಿ ಸಚಿವ ಆಚಾರ ಹಾಲಪ್ಪ ಬಸಪ್ಪ ಅವರು ಸನ್ಮಾನಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ ಇಟ್ನಾಳ್, ಲೋಕೇಶ ಜಗಲಾಸರ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ.ಗೋಪಾಲಕೃಷ್ಣ ಬಿ., ಹಿರಿಯ ಸಾಹಿತಿ ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ನವೀನ ಸವಣೂರು ಪ್ರಾಸ್ತಾವಿಕವಾಗಿ ಮಾತನಾಡಿದರು, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿ ಭಾರತಿ ಶೆಟ್ಟರ ಸ್ವಾಗತಿಸಿದರು, ಆರತಿ ದೇವಶಿಖಾಮಣಿ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಮಕ್ಕಳು, ವಿವಿಧ ಗಣ್ಯರು, ಮಕ್ಕಳ ಸಾಹಿತಿಗಳು, ಸಾರ್ವಜನಿಕರು ಭಾಗವಹಿಸಿದ್ದರು.