ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆತ್ಮೀಯವಾಗಿ ಬರಮಾಡಿಕೊಂಡರು.
ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಮೋದಿ, ವಿಶೇಷ ಹೆಲಿಕಾಪ್ಟರ್ ನಲ್ಲಿ ಇಂಡಿಯಾ ಎನರ್ಜಿ ವೀಕ್ ಉದ್ಘಾಟಿಸಲು ನಗರದ ಹೊರವಲಯದಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡಿದರು.
ತಮ್ಮ ಒಂದು ದಿನದ ಭೇಟಿಯಲ್ಲಿ ಪ್ರಧಾನಮಂತ್ರಿಯವರು ತುಮಕೂರಿನ ಗುಬ್ಬಿ ತಾಲ್ಲೂಕಿನಲ್ಲಿ ಎಚ್ ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ಉದ್ಘಾಟಿಸಲಿದ್ದಾರೆ. 615 ಎಕರೆ ಪ್ರದೇಶದಲ್ಲಿ ವ್ಯಾಪಿಸಿರುವ ಈ ಉತ್ಪಾದನಾ ಸೌಲಭ್ಯವನ್ನು ಲೈಟ್ ಯುಟಿಲಿಟಿ ಹೆಲಿಕಾಪ್ಟರ್ ಗಳು ಮತ್ತು ಭಾರತೀಯ ಮಲ್ಟಿರೋಲ್ ಹೆಲಿಕಾಪ್ಟರ್ ಗಳ ಭಾರತದ ಅತಿದೊಡ್ಡ ಉತ್ಪಾದನಾ ಸೌಲಭ್ಯ ಎಂದು ಕರೆಯಲಾಗುತ್ತದೆ.
ಎಚ್ಎಎಲ್ ಉತ್ಪಾದನಾ ಕಾರ್ಖಾನೆಯನ್ನು ಉದ್ಘಾಟಿಸಿದ ನಂತರ ಅವರು ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಉತ್ಪಾದನಾ ಘಟಕಕ್ಕೆ 2016 ರಲ್ಲಿ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು.
ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ನಲ್ಲಿ ಕೈಗಾರಿಕಾ ನೋಡ್ ಆಗಿರುವ ತುಮಕೂರು ಕೈಗಾರಿಕಾ ಟೌನ್ ಶಿಪ್ ಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಯು 90,000 ಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದು 1,722 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ ಮತ್ತು ಇದನ್ನು 1,701 ಕೋಟಿ ರೂ.ಗಳ ವೆಚ್ಚದಲ್ಲಿ ಜಾರಿಗೆ ತರಲಾಗುತ್ತಿದೆ.
ನಂತರ ತಿಪಟೂರು ತಾಲ್ಲೂಕು ಮತ್ತು ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜಲ ಜೀವನ್ ಮಿಷನ್ ಅಡಿಯಲ್ಲಿ 1.86 ಲಕ್ಷ ಜನರಿಗೆ ಹೇಮಾವತಿ ನದಿಯಿಂದ 435 ಕೋಟಿ ಮತ್ತು 115 ಕೋಟಿ ರೂ.ಗಳ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಬಹುಗ್ರಾಮ ನೀರು ಸರಬರಾಜು ಯೋಜನೆಗಳನ್ನು ಮೋದಿ ಉದ್ಘಾಟಿಸಲಿದ್ದಾರೆ.
ಪ್ರಧಾನಿಯವರು ಇನ್ನೂ ಎರಡು ಬಾರಿ ಕರ್ನಾಟಕಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಅವರ ಭೇಟಿ ಈಗಾಗಲೇ ದೃಢಪಟ್ಟಿದೆ.
ಫೆಬ್ರವರಿ 13 ರಿಂದ 17 ರವರೆಗೆ ನಡೆಯಲಿರುವ ಏರೋ ಇಂಡಿಯಾ ಪ್ರದರ್ಶನವನ್ನು ಉದ್ಘಾಟಿಸಲು ಮೋದಿ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ರಾಜ್ಯ ಮತ್ತು ಕೇಂದ್ರದಲ್ಲಿನ ಡಬಲ್ ಎಂಜಿನ್ ಸರ್ಕಾರದ ಅಭಿವೃದ್ಧಿ ಮತ್ತು ಕೊಡುಗೆಯನ್ನು ಪ್ರಧಾನಿ ಎತ್ತಿ ತೋರಿಸಲಿದ್ದಾರೆ ಎಂದು ಬಿಜೆಪಿ ಆಂತರಿಕ ಮೂಲಗಳು ತಿಳಿಸಿವೆ.