ಬೆಂಗಳೂರು: ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು ಸೇರಿದಂತೆ ಕನಿಷ್ಠ 8 ರಿಂದ 9 ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂಬ ವಿಶ್ವಾಸವನ್ನು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.
ರಾಮನಗರ ತಾಲೂಕು ಪಂಚಾಯಿತಿ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶ ಏನೇ ಆದರೂ ಪಕ್ಷದ ಮೇಲೆ ಪ್ರಭಾವ ಬೀರುವುದಿಲ್ಲ. ಮುಂದಿನ ತಿಂಗಳು ನಡೆಯಲಿರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೆ ಪಕ್ಷ ಹೆಚ್ಚಿನ ಗಮನ ಕೇಂದ್ರೀಕರಿಸುತ್ತಿದೆ ಎಂದರು. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣಾ ಫಲಿತಾಂಶ ಮುಂದೆ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಮೇಲೆ ಪರಿಣಾಮ ಬೀರಲಿರುವುದರಿಂದ ಪಕ್ಷವನ್ನು ಕೆಳಹಂತದಿಂದ ಬಲಪಡಿಸಲು ಒತ್ತು ನೀಡಲಾಗುತ್ತಿದೆ ಎಂದು ಇದೇ ಸಂದರ್ಭ ಹೇಳಿದರು.