ಬೆಂಗಳೂರು: ವಿವಾದಾತ್ಮಕ ಡೈರಿ ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಹಿರಿಯ ಸಚಿವರನ್ನು ಹಾಗೂ ಸಂಸದೀಯ ಕಾರ್ಯದರ್ಶಿ ಸ್ಥಾನದಿಂದ ಗೋವಿಂದರಾಜ್ ಅವರನ್ನು ಕೈಬಿಡದೇ ಇರಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಸಮನ್ವಯ ಸಮಿತಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಸಂಪುಟ ಪುನರ್ ರಚನೆ ಪ್ರಸ್ತಾವ ಇಲ್ಲ ಎಂದರು. ಅಂತಹ ಯಾವುದೇ ಪ್ರಸ್ತಾವ ಇಲ್ಲ. ಅಂತಹ ಪ್ರಸ್ತಾವ ಇದೆ ಎಂದು ಯಾರು ಹೇಳಿದರು? ಅವೆಲ್ಲವೂ ಮಾಧ್ಯಮಗಳ ವಿರುದ್ಧ ಕಿಡಿ ಕಾರಿದರು.
ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟು ನಾಲ್ಕು ವರ್ಷ ಪೂರೈಸಿದ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಪಕ್ಷ ಸಂಘಟನೆಗೆ ಬಳಸಿಕೊಳ್ಳುವ ಪ್ರಸ್ತಾವ ಸಮನ್ವಯ ಸಮಿತಿ ಸಭೆಯ ಕರಡು ಕಾರ್ಯಸೂಚಿಯಲ್ಲಿ ಇದೆ ಎಂಬ ಸುದ್ದಿ ಪಕ್ಷದ ವಲಯದಲ್ಲಿ ಗೊಂದಲ ಸೃಷ್ಟಿಸಿತ್ತು. ಈ ಸುದ್ದಿಯ ಬಗ್ಗೆ ಉತ್ತರಿಸಿದ ಸಿಎಂ ಅಂಥಹ ಯಾವುದೇ ಯೋಚನೆ ಸದ್ಯ ನಮ್ಮ ಮುಂದಿಲ್ಲ ಎಂದು ಸ್ಪಷ್ಟ ಪಡಿಸಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ನಾಯಕರು, ಸಚಿವರು ಭಾಗವಹಿಸಿದ್ದರು.