ಚಿಕ್ಕಮಗಳೂರು: ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆ ಸಂಬಂಧ ಬಿಎಸ್ವೈ ವೋಟುಗಳನ್ನು ಜೇಬಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಮಾತನಾಡಿದ ಅವರು ನಾನು ವೋಟುಗಳನ್ನು ಜೇಬಿನಲ್ಲಿ ಇಟ್ಟುಕೊಂಡು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿಲ್ಲ. ಜನಬಲ, ದೈವಬಲದಿಂದ ಗೆಲ್ಲುವ ವಿಶ್ವಾಸ ಹೊಂದಿದ್ದು ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ಗೆಲ್ಲುತ್ತೇನೆ ಎಂದರು. ಇನ್ನು ಪಂಚರಾಜ್ಯ ಚುನಾವಣೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುತ್ತೆ ಎಂಬ ವಿಶ್ವಾಸ ನನಗಿದೆ ಎಂದರು.
ಇದೇ ವೇಳೆ ಕಸ್ತೂರಿ ರಂಗನ್ ವರದಿ ಬಗ್ಗೆ ಮಾತನಾಡಿದ ಬಿಎಸ್ವೈ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಟಾನವಾಗಲಿದ್ದು ಜನರು ಸಾಕಷ್ಟು ಆತಂಕದಲ್ಲಿದ್ದಾರೆ. ಕೇರಳ ಸರ್ಕಾರದ ರೀತಿ ವರದಿ ನೀಡಲು ಸರ್ಕಾರ ವಿಫಲವಾಗಿದ್ದು ಇದಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗಿದ್ದು, ಯಾವುದೇ ಕಾರಣಕ್ಕೂ ಈ ವರದಿ ರಾಜ್ಯದಲ್ಲಿ ಜಾರಿಯಾಗಲು ಬಿಡುವುದಿಲ್ಲ. ಈ ಸಂಬಂಧ ಎಲ್ಲಾ ಸಂಸದರು ಒಟ್ಟಾಗಿ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುತ್ತೇವೆ ಎಂದರು.