ಬೆಂಗಳೂರು, ; ಕರ್ನಾಟಕದಲ್ಲಿ ಅತಿ ಹೆಚ್ಚು ಕೋವಿಡ್ ಹೊಸ ಪ್ರಕರಣ, ಸಾವಿನ ಸಂಖ್ಯೆ ದಾಖಲಾಗುತ್ತಿರುವುದು ಬೆಂಗಳೂರಿನಲ್ಲಿ. ಬಿಬಿಎಂಪಿ ನಗರದಲ್ಲಿ ಕೋವಿಡ್ ಸೋಂಕು ಹರಡುವಿಕೆ ತಡೆಗೆ ಪ್ರಯತ್ನ ನಡೆಸುತ್ತಲೇ ಇದೆ. ಕೋವಿಡ್ ಸೋಂಕಿತರು ಹೋಂ ಐಸೋಲೇಷನ್‌ನಲ್ಲಿಯೇ ಚಿಕಿತ್ಸೆ ಪಡೆಯಲು ಬಯಸುತ್ತಾರೆ. ಬೆಂಗಳೂರಿನಲ್ಲಿ ಮೇ ತಿಂಗಳಿನಲ್ಲಿ ಹೋಂ ಐಸೋಲೇಷನ್‌ನಲ್ಲಿದ್ದ 778 ಸೋಂಕಿತರು ಮೃತಪಟ್ಟಿದ್ದಾರೆ.
ಬಿಬಿಎಂಪಿಯ ಡೆಡ್ ಆಡಿಟ್ ಕಮಿಟಿ ನೀಡಿರುವ ಮಾಹಿತಿ ಇದಾಗಿದೆ. ಆಯುಕ್ತ ಗೌರವ್ ಗುಪ್ತ ಇದನ್ನು ಗಂಭೀರವಾಗಿ ಪರಿಗಣಿಸಿದ್ದು ಕೆಲವು ಸ್ಪಷ್ಟನೆಗಳ ಜೊತೆ ವಿವರವಾದ ವರದಿಯನ್ನು ಕೇಳಿದ್ದಾರೆ. ಬೆಂಗಳೂರಿನಲ್ಲಿ ಸಾವಿನ ಪ್ರಮಾಣವನ್ನು ತಗ್ಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿ ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರ ಸಾವಿಗೆ ನಿಖರ ಕಾರಣ ಏನೆಂದು ವಿವರವಾದ ವರದಿಯನ್ನು ಆಯುಕ್ತರಿಗೆ ನೀಡಲಿದೆ. ಗ್ರಾಮೀಣ ಮತ್ತು ಪಟ್ಟಣ ಪ್ರದೇಶದಲ್ಲಿ ಕೋವಿಡ್ ಸೋಂಕಿತರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾಗಬೇಕು ಎಂದು ಆರೋಗ್ಯ ಇಲಾಖೆ ಹೇಳಿದೆ. ಆದರೆ ಬೆಂಗಳೂರು ನಗರದಲ್ಲಿ ಹೆಚ್ಚು ಜನರು ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯಲು ಬಯಸುತ್ತಾರೆ.
ಮೇ 20ರ ಮಾಹಿತಿಯಂತೆ ಬೆಂಗಳೂರಿನಲ್ಲಿ 9409 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 306625. ಇದುವರೆಗೂ ಮೃತಪಟ್ಟವರ ಸಂಖ್ಯೆ 10527.