ಬೆಂಗಳೂರು,ಡಿ.8 : ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಡಿ.10ರಂದು ಮತದಾನ ನಡೆಯಲಿದ್ದು, ಮತದಾನದ ಕೊನೆಯ ಒಂದು ಗಂಟೆ ಅವಧಿಯಲ್ಲಿ ಕೋವಿಡ್ ಸೋಂಕಿತರಿಗೆ ಪಿಪಿಇ ಕಿಟ್ ಧರಿಸಿ, ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಡಿಸೆಂಬರ್ 10ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಯಿಂದ ಸಂಜೆ 4 ಗಂಟೆಯವರೆಗಿನ ಒಂದು ಗಂಟೆಗಳ ಕಾಲಾವಧಿಯಲ್ಲಿ ಅರೋಗ್ಯ ಸಿಬ್ಬಂದಿಗಳ ಉಸ್ತುವಾರಿಯಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ, ಪಿಪಿಇ ಕಿಟ್ ಧರಿಸಿ, ಕೋವಿಡ್ ಸೋಂಕಿತರು ಸಂಬಂಧಿಸಿದ ಮತಗಟ್ಟೆಯಲ್ಲಿ ಮತದಾನ ಮಾಡಬಹುದಾಗಿದೆ.
ಪ್ರತಿ ಮತಗಟ್ಟೆಗಳಲ್ಲಿಯೂ ಕೋವಿಡ್-19 ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಕಡ್ಡಾಯವೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಕಾರಿಗಳಾದ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.