ಬೆಂಗಳೂರು: ಶಾಲಾ ಮಕ್ಕಳಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದರೆ ತತ್‌ಕ್ಷಣ ಭೌತಿಕ ತರಗತಿಗಳಿಗೆ ಹಾಜರಾಗದಂತೆ ಸೂಚಿಸಿ ರಜೆ ನೀಡಬೇಕು ಎಂದು ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲ ಶಾಲೆಗಳಿಗೆ ಸೂಚನೆ ನೀಡಿದೆ.
ರಾಜ್ಯದ ಶಾಲೆಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.
10ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಕಂಡು ಬಂದರೆ , ಶಾಲೆಗಳಿಗೆ ರಜೆ ಘೋಷಿಸಬೇಕು. ನಂತರ ಕಟ್ಟಡವನ್ನು ಸ್ಯಾನಿಟೈಸ್ ಮಾಡಿಸಬೇಕು. 50 ವರ್ಷ ಮೇಲ್ಪಟ್ಟವರು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು. ಪೂರ್ವಭಾವಿ ಆರೋಗ್ಯ ಲಕ್ಷಣಗಳನ್ನು ಹೊಂದಿರುವವರು ಅಗತ್ಯಾನುಸಾರ ಹೆಚ್ಚಿನ ಕ್ರಮವಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ| ಆರ್. ವಿಶಾಲ್ ಸುತ್ತೋಲೆ ಹೊರಡಿಸಿದ್ದಾರೆ.