ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 9 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.