ಬೆಂಗಳೂರು: ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಸಮ್ಮತಿಸಿದೆ.
ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರಂದು ಹಿಜಾಬ್ ಧರಿಸುವುದು ಇಸ್ಲಾಂನ ಅಗತ್ಯ ಆಚರಣೆಯ ಅಡಿಯಲ್ಲಿ ಬರುವುದಿಲ್ಲ ಎಂದು ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧವಾಗಿ ಸುಪ್ರಿಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.
ಈ ಕುರಿತು ವಕೀಲ ಪ್ರಶಾಂತ್ ಭೂಷಣ್ ಅವರು ಪ್ರಸ್ತಾಪಿಸಿದ ನಂತರ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರ ನೇತೃತ್ವದ ಪೀಠವು ಮುಂದಿನ ವಾರ ಸೂಕ್ತ ಪೀಠದ ಮುಂದೆ ವಿಷಯವನ್ನು ವಿಚಾರಣೆ ನಡೆಸಲು ಸಮ್ಮತಿಸಿದೆ.
ಈ ಕುರಿತು ಮಾರ್ಚ್ ನಲ್ಲಿಯೇ ಮೇಲ್ಮನವಿ ಸಲ್ಲಿಸಲಾಗಿತ್ತು. ಆದರೆ ಇನ್ನೂ ವಿಚಾರಣೆಯನ್ನು ಕೈಗೆತ್ತಿಕೊಂಡಿರಲಿಲ್ಲ ಎಂದು ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.