ಬೆಂಗಳೂರು/ ಮಂಡ್ಯ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರೈತರು, ಸಾರ್ವಜನಿಜನಿಕರಿಂದ ಭಾರಿ ಆಕ್ರೋಶ ಎದುರಾಗಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಅವರನ್ನು ಬಂಧಿಸುವ ಮೂಲಕ ಅವರ ಪ್ರಯತ್ನವನ್ನು ವಿಫಲಗೊಳಿಸಿದರು.
ಏತನ್ಮಧ್ಯೆ, ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಅನುಸರಿಸದಂತೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಅವರು ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತ ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ, ಮಂಡ್ಯದ ಸಂಜಯ್ ವೃತ್ತದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಲಗಿ ರೈತರು ಪ್ರತಿಭಟನೆ ಮಾಡಿದ ಪರಿಣಾಮ ಸಂಚಾರ ದಟ್ಟಣೆ ಉಂಟಾಗಿ ಸವಾರರಿಗೆ ಅನಾನುಕೂಲವಾಯಿತು.
ಕಾವೇರಿ ಕೊಳ್ಳದ ಡ್ಯಾಮ್ಗಳಲ್ಲಿ ನೀರೇ ಇಲ್ಲದಿದ್ದರೂ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಇವರಿಗೆ ತಕ್ಕ ಉತ್ತರ ನೀಡುತ್ತೇವೆ. ಸಂಸದರು, ಶಾಸಕರು ಬಂದರೆ ಕಲ್ಲಿನಲ್ಲಿ ಹೊಡೆಯುತ್ತೇವೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮುಖ್ಯಮಂತ್ರಿಗಳು ಓಡಾಡದಂತೆ ಮಾಡುತ್ತೇವೆ ಎಂದು ಪ್ರತಿಭಟನಾನಿರತ ರೈತ ಮುಖಂಡ ಸಿದ್ದೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.