ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳ ಯೋಜನೆಗಳಾದ ‘ಗೃಹಲಕ್ಷ್ಮೀ’ ಹಾಗೂ ‘ಗೃಹಜ್ಯೋತಿ’ ಯೋಜನೆಗಳ ಜಾಹಿರಾತು ಹಾಗೂ ಫಲಾನುಭವಿಗಳಿಗೆ ನೀಡಲಾದ ಮಂಜೂರಾತಿ ಪತ್ರದಲ್ಲಿ ಹಾಕಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಹೆಸರು/ಭಾವಚಿತ್ರಗಳನ್ನು ತೆರವುಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಈ ಕುರಿತಂತೆ ಬೆಳಗಾವಿ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ, ಅರ್ಜಿಯಲ್ಲಿ ವಿಚಾರಣೆಗೆ ಪರಿಗಣಿಸುವ ಯಾವ ಅಂಶಗಳು ಕಂಡುಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಗೃಹ ಜ್ಯೋತಿ ಹಾಗೂ ಗೃಹ ಲಕ್ಷ್ಮೀ ಯೋಜನೆಗಳ ಜಾಹಿರಾತುಗಳು ಹಾಗೂ ಯೋಜನೆಯ ಫಲಾನುಭವಿಗಳಿಗೆ ನೀಡಲಾಗಿರುವ ಮಂಜೂರಾತಿ ಪತ್ರದಲ್ಲಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಹಾಗೂ ಸಚಿವರ ಹೆಸರು ಹಾಗೂ ಭಾವಚಿತ್ರಗಳನ್ನು ಹಾಕಲಾಗಿದೆ. ಇದು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನ ಆದೇಶಗಳ ಉಲ್ಲಂಘನೆಯಾಗಿದೆ ಎಂದಿದ್ದರು. ಆದರೆ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.