ರಾಮನಗರ: ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಪೂರಕವಾಗಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ದಾಸ್ ಆಯೋಗದ ವರದಿಯನ್ನು ಯಥಾವತ್ ಜಾರಿಗೆ ತರುವಂತೆ ಒತ್ತಾಯಿಸಿ ಬಹುಜನ ಸಮಾಜ ಪಾರ್ಟಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ನಗರದ ಮಿನಿ ವಿಧಾನಸೌಧದಲ್ಲಿರುವ ತಹಸೀಲ್ದಾರ್ ಕಚೇರಿಗೆ ತೆರಳಿದ ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ನಾಗೇಶ್ ಅವರ ನೇತೃತ್ವದ ಕಾರ್ಯಕರ್ತರ ತಂಡ ಸರ್ಕಾರಕ್ಕೆ ರವಾನಿಸುವಂತೆ ಕೋರಿ ಉಪ ತಹಸೀಲ್ದಾರ್ ಭಾಸ್ಕರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದೆ.
ಈ ವೇಳೆ ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ನಾಗೇಶ್ ಅವರು ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೈಕ್ಷಣಿಕ ಸಂಸ್ಥೆಗಳ ಪ್ರವೇಶಗಳಲ್ಲಿ, ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಇಲಾಖೆಗಳು ಮತ್ತು ಸರ್ಕಾರಿ ಸಾಮ್ಯದ ಸಂಸ್ಥೆಗಳು ಹಾಗೂ ಉದ್ದಿಮೆಗಳ ಎಲ್ಲಾ ನೇಮಕಾತಿಯಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ದಾಸ್ ಅವರ ಏಕ ಸದಸ್ಯ ಆಯೋಗದ ವರದಿಯನ್ನು ತಕ್ಷಣವೇ ಜಾರಿಗೆ ತರುವಂತೆ ಆಗ್ರಹಿಸಿದರು.
ಶೈಕ್ಷಣಿಕ ಸಂಸ್ಥೆಗಳ ಪ್ರವೇಶ ಮತ್ತು ರಾಜ್ಯ ಸರ್ಕಾರದ ಸೇವೆಗಳಲ್ಲಿ ಮೀಸಲಾತಿ ಪ್ರಮಾಣವನ್ನು ಜನಸಂಖ್ಯೆಗೆ ಅನುಗುಣವಾಗಿ ಶೇಕಡ 15ಕ್ಕೆ ಹೆಚ್ಚಿಸಬೇಕೆಂದು ಸಮುದಾಯದ ಹಲವಾರು ಸಂಘಟನೆಗಳು ಕಳೆದ ಹಲವಾರು ದಶಕಗಳಿಂದ ಮನವಿ ಮಾಡಿ ಒತ್ತಾಯಿಸುತ್ತಲೇ ಬಂದಿದ್ದಾರೆ. ಆದರೆ ಸರ್ಕಾರ ಮನವಿಗಳನ್ನು ಮೂಲೆಗೆ ಎಸೆದು ಮೀಸಲಾತಿ ಪ್ರಮಾಣವನ್ನು ಹೆಚ್ಚು ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಬಿಎಸ್ಪಿ ಮುಖಂಡರಾದ ಬಾಬು, ಮುರುಗೇಶ್, ಸ್ವಾಮಿ, ಶ್ರೀನಿವಾಸ್ ರಾವ್, ರಮೇಸ್, ಭೈರಪ್ಪ, ನವೀನ್, ವೆಂಕಟೇಶ್, ಗುರುಪ್ರಸಾದ್ ಇದ್ದರು