ರಾಮನಗರ: ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ಮತ್ತು ಬಿಡದಿ ಪುರಸಭೆ ವ್ಯಾಪ್ತಿಯಲ್ಲಿ ಮುಂದಿನ ಎರಡು ವಾರಗಳಲ್ಲಿ 145 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ತಿಳಿಸಿದರು.
ನವೆಂಬರ್ 1ರ ಮಂಗಳವಾರ ನಡೆದ 67ನೇ ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಿದ ನಂತರ ಅವರು ಮಾತನಾಡುತ್ತಿದ್ದರು. ಜಿಲ್ಲೆಯ ಪೌರಕಾರ್ಮಿಕರು ಸೇರಿದಂತೆ ದುರ್ಬಲರಿಗೆ ವಸತಿ ಮತ್ತು ಇತರ ನಾಗರಿಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಅವರು ಭರವಸೆ ನೀಡಿದರು. ಇದಲ್ಲದೆ, ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 10 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
‘ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮತ್ತು ಆತಿಥ್ಯ ಕೈಗಾರಿಕೆಗಳ ಬೆಳವಣಿಗೆಗೆ ವಿಫುಲ ಅವಕಾಶಗಳಿವೆ. ಈ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಆಸಕ್ತ ಉದ್ಯಮಿಗಳು ಮತ್ತು ಹೂಡಿಕೆದಾರರ ಪ್ರಮುಖ ಸಭೆಯನ್ನು ಈಗಾಗಲೇ ನಡೆಸಲಾಗಿದೆ” ಎಂದು ಅವರು ಹೇಳಿದರು.