ಬೀದರ್: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವು ಬರುವ ದಿನಗಳಲ್ಲಿ ಜಿಲ್ಲೆಯ ನೂರು ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಉಪಕರಣ ಒದಗಿಸುವ ಗುರಿ ಹೊಂದಿದೆ ಎಂದು ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಹೇಳಿದರು.
ನಗರದ ಮೈಲೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಆಯೋಜಿಸಿದ್ದ ಸ್ಮಾರ್ಟ್ ಕ್ಲಾಸ್ ಶಿಕ್ಷಕರ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಘದಿಂದ ಜಿಲ್ಲೆಯಲ್ಲಿ ಈಗಾಗಲೇ 70 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಉಪಕರಣ ಕೊಡಲಾಗಿದೆ ಎಂದು ತಿಳಿಸಿದರು.
ಶೈಕ್ಷಣಿಕ ಗುಣಮಟ್ಟದ ವೃದ್ಧಿ ಹಾಗೂ ಮಕ್ಕಳನ್ನು ಶಾಲೆಗೆ ಆಕರ್ಷಿಸಲು ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಬೆಳಮಗಿ ಕಾರ್ಯಕ್ರಮ ಉದ್ಘಾಟಿಸಿದರು. ವಿಕಾಸ ಅಕಾಡೆಮಿ ಜಿಲ್ಲಾ ಅಧ್ಯಕ್ಷ, ನಿವೃತ್ತ ಕರ್ನಲ್ ಶರಣಪ್ಪ ಸಿಕೇನಪುರ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಹೇಶ ಗೋರನಾಳಕರ್ ಮಾತನಾಡಿದರು.
ಶಾಲೆಯ ಮುಖ್ಯಶಿಕ್ಷಕ ಬಳವಂತರಾವ್ ಪಾಂಡ್ರೆ ಉಪಸ್ಥಿತರಿದ್ದರು. ಶಿಕ್ಷಕ ಸಂಜುಕುಮಾರ ಸ್ವಾಗತಿಸಿದರು. ದೇವಿಪ್ರಸಾದ್ ಕಲಾಲ್ ನಿರೂಪಿಸಿದರು. ರಾಘವೇಂದ್ರ ಕುಲಕರ್ಣಿ ವಂದಿಸಿದರು.