ಔರಾದ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಔರಾದ ಪಟ್ಟಣದ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ತಾಲ್ಲೂಕು ಸ್ತ್ರೀಶಕ್ತಿ ಒಕ್ಕೂಟದ ಕಾರ್ಯಾಗಾರದಲ್ಲಿ ಪಶುಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ಅಮೃತ ಯೋಜನೆಗಳಡಿ 70 ಮಹಿಳಾ ಸ್ವಸಹಾಯ ಸಂಘಗಳಿಗೆ ಸಹಾಯಧನದ ಚೆಕ್ಕುಗಳನ್ನು ವಿತರಿಸಿದರು.
ಬಳಿಕ ಮಾತನಾಡಿದ ಸಚಿವರು, ಮಹಿಳೆಯರು ಕೂಡ ಆರ್ಥಿಕವಾಗಿ ಸಬಲರಾಗಿ ಸ್ವವಾಲಂಬಿ ಜೀವನ ಸಾಗಿಸಬೇಕು ಎಂಬ ಉದ್ದೇಶದಿಂದ ಸರ್ಕಾರವು ನಾನಾ ಯೋಜನೆಗಳನ್ನು ಜಾರಿಗೊಳಿಸಿದೆ. ಕಿರು ಉದ್ದಿಮೆಗಳನ್ನು ಕೈಗೊಂಡು ಆರ್ಥಿಕವಾಗಿ ಸಶಕ್ತರಾಗುವಂತೆ ಮಾಡಲು ಸರ್ಕಾರ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ 1 ಲಕ್ಷ ಆರ್ಥಿಕ ಸಹಾಯ ಮಾಡುವ ಜೊತೆಗೆ ತರಬೇತಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಇದರ ಸದುಪಯೋಗ ಪಡೆಯಬೇಕು ಎಂದರು.
ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಹೆಚ್ಚು ಜವಾಬ್ದಾರಿಗಳನ್ನು ವಹಿಸಿಕೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಎಲ್ಲ ಮಹಿಳೆಯರೂ ಆರ್ಥಿಕವಾಗಿ ಸಬಲರಾಗಬೇಕಿದೆ. ಈ ದಿಶೆಯಲ್ಲಿ ಸರ್ಕಾರ ನಿರಂತರ ಪ್ರಯತ್ನಿಸುತ್ತಿದೆ. ಸರ್ಕಾರದ ಯೋಜನೆಗಳ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸುವ ಮೂಲಕ ಸರ್ಕಾರದ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರದ ಆಶಯವನ್ನು ಸಾಕಾರಗೊಳಿಸಲು ಮಹಿಳೆಯರು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಭಾಗ್ಯಲಕ್ಷ್ಮೀ ಯೋಜನೆಯ ಬಾಂಡ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರರಾದ ಮಲ್ಲಿಕಾರ್ಜುನ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸುರೇಶ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭೀಮಸೇನ ಚವ್ಹಾಣ, ತಾಲ್ಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರಾದ ಕಾವೇರಿ, ಮುಖಂಡರಾದ ದೊಂಡಿಬಾ ನರೋಟೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ಮಹಿಳಾ ಸ್ವಸಹಾಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.