ಬೀದರ್: ಬಿಜೆಪಿ ಪಕ್ಷದಲ್ಲಿ ಪ್ರಮುಖರಾಗಿ ಗುರುತಿಸಿಕೊಂಡಿದ್ದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ನಿರ್ಣಾ ಗ್ರಾಮದ ಮಲ್ಲಿಕಾರ್ಜುನ ನಾಗವಾರ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖರಾಗಿದ್ದ ಗೋಪಾಲರೆಡ್ಡಿ ಸಾಯಿರೆಡ್ಡಿರವರು ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ ಕುಮಾರಸ್ವಾಮಿರವರು, ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಮೈಸೂರಿನಲ್ಲಿ ಭಾನುವಾರ ನಡೆದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಕಾರ್ಯಕ್ರಮದ ಸಮಾರೋಪ ಸಮಾರಂಭದ ವೇಳೆ ಇಬ್ಬರಿಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಪಕ್ಷ ಸಂಘಟನೆ ಬಲವರ್ಧನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಪೂರ್, ಪ್ರಮುಖರಾದ ಮಾರುತಿ ಬೌದ್ಧೆ, ಸಂಜುರೆಡ್ಡಿ ನಿರ್ಣಾ, ರಾಜು ಕಡ್ಯಾಳ್, ರಾಜು ಚಿಂತಾಮಣಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.