ಕಲಬುರಗಿ, ಜ.19: ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ 10,800 ಕೋಟಿ ರೂ.ಗಳ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರ್ನಾಟಕಕ್ಕೆ ಆಗಮಿಸಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆತ್ಮೀಯವಾಗಿ ಸ್ವಾಗತಿಸಿದರು.
ನಂತರ ಪ್ರಧಾನಿ ಮೋದಿ ವಿಶೇಷ ಹೆಲಿಕಾಪ್ಟರ್ ಮೂಲಕ ಯಾದಗಿರಿ ಜಿಲ್ಲೆಯ ಕೊಡೇಕಲ್ ಗ್ರಾಮಕ್ಕೆ ತೆರಳಿದರು. ಜನವರಿಯಲ್ಲಿ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ನೀಡುತ್ತಿರುವ ಎರಡನೇ ಭೇಟಿ ಇದಾಗಿದೆ.
ಅವರ ಭೇಟಿಯೊಂದಿಗೆ, ಹೈದರಾಬಾದ್-ಕರ್ನಾಟಕ ಎಂದೂ ಕರೆಯಲ್ಪಡುವ ಕಲ್ಯಾಣ ಕರ್ನಾಟಕ ಪ್ರದೇಶದ 41 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಭಾವ ಬೀರಲು ಆಡಳಿತಾರೂಢ ಬಿಜೆಪಿ ಆಶಿಸುತ್ತಿದೆ.
ಇದಲ್ಲದೆ, ಒಟ್ಟು 51,000 ಬಂಜಾರ ಸಮುದಾಯದ ಸದಸ್ಯರಿಗೆ ಆಸ್ತಿ ದಾಖಲೆಗಳನ್ನು ವಿತರಿಸಲಾಗುವುದು. ಯಾದಗಿರಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮೂರು ಲಕ್ಷಕ್ಕೂ ಹೆಚ್ಚು ಜನರು ಸೇರಲು ವ್ಯವಸ್ಥೆ ಮಾಡಲಾಗುತ್ತಿದೆ.