ಬಂಟ್ವಾಳ: ಶೈಕ್ಷಣಿಕ ಆಂದೋಲನದ ಮೂಲಕ ಸರಕಾರಿ ಶಾಲೆ ಉಳಿಸಿ ಅಭಿಯಾನ ನಡೆಸುತ್ತಿರುವ ಕರೆಂಕಿ ಶ್ರೀ ದುರ್ಗಾಫ್ರೆಂಡ್ಸ್ ಕ್ಲಬ್ ತನ್ನ ಕಾರ್ಯಚಟುವಟಿಕೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಅವರನ್ನು ಭೇಟಿ ಮಾಡಿದ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಸರಕಾರಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಕ್ಲಬ್ ಕೈಗೊಂಡಿರುವ ಯೋಜನೆ ಹಾಗೂ ಕೇರಳ ರಾಜ್ಯದ ಸರ್ಕಾರಿ ಶಾಲೆಗಳ ಸ್ಥಿತಿಗತಿಗಳ ಅಧ್ಯಯನ ಪ್ರವಾಸದ ಬಗ್ಗೆ ವಿವರಿಸಿದರು. ಅಲ್ಲದೆ ಮುಂದಿನ ಎಪ್ರಿಲ್ ತಿಂಗಳಿನಲ್ಲಿ ಉದ್ಘಾಟನೆಗೊಳ್ಳಲಿರುವ ಕ್ಲಬ್ ನ ದತ್ತು ಯೋಜನೆಯಡಿ ನಿರ್ಮಾಣಗೊಂಡ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸುವಂತೆ ಆಹ್ವಾನಿಸಲಾಯಿತು.
ಈ ಸಂದರ್ಭ ಮಾಜಿ ಶಾಸಕರಾದ ಎ. ರುಕ್ಮಯಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಮುಖಂಡ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ಹಾಜರಿದ್ದರು.