ಕಾರವಾರ: ಲ್ಲಾಪುರ ಉಪ ಚುನಾವಣೆ ಸಂಬಂಧ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರ ಫೇಸ್‌ಬುಕ್, ಟ್ವಿಟ್ಟರ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳೂ ಚುನಾವಣಾ ಆಯೋಗದ ಕಣ್ಗಾವಲಿನಲ್ಲಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಹರೀಶ್‌ಕುಮಾರ್ ಕೆ. ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿಂತೆ ಜಾರಿ ಆದಾಗಿನಿಂದಲೂ ತಮ್ಮ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಹಾಗೂ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿ ಮಾಧ್ಯಮ ದೃಢೀಕರಣ ಮತ್ತು ಕಣ್ಗಾವಲು ಸಮಿತಿ (ಎಂಸಿಎಂಸಿ) ಕಾರ್ಯ ನಿರ್ವಹಿಸುತ್ತಿದ್ದು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದರು.
ಜಿಲ್ಲಾ ಮಟ್ಟದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಮಿತಿ ಕಾರ್ಯನಿರ್ವಹಿಸುತ್ತಿದ್ದು ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ಕಚೇರಿಯಲ್ಲಿ (ಎಂಸಿಎಂಸಿ) ಕಾರ್ಯನಿರ್ವಹಿಸುತ್ತಿದೆ. ಪತ್ರಿಕೆಗಳಲ್ಲಿ ಬರುವ ರಾಜಕೀಯ ಸುದ್ದಿಗಳು, ಜಾಹೀರಾತುಗಳು ಹಾಗೂ ಕಾಸಿಗಾಗಿ ಸುದ್ದಿ ಸಂಬಂಧಿಸಿದಂತೆ ಪ್ರತಿದಿನವೂ ಪರಿಶೀಲಿಸಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಕಳಿಸಲಾಗುತ್ತಿದೆ ಮತ್ತು ವಿದ್ಯುನ್ಮಾನ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಿ ಎಲ್ಲವನ್ನೂ ದಾಖಲಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಯಾವುದೇ ಪ್ರಕರಣಗಳು ಕಂಡುಬಂದಲ್ಲಿ ಅಥವಾ ಸಾರ್ವಜನಿಕರಿಗೆ ಸಂಶಯಾಸ್ಪದವಾಗಿ ಉಲ್ಲಂಘನೆ ಪ್ರಕರಣಗಳು ಗಮನಕ್ಕೆ ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಅಥವಾ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ತಮಗೆ ಹಾಗೂ ಯಲ್ಲಾಪುರ ಉಪ ಚುನಾವಣೆಚುನಾವಣಾಧಿಕಾರಿಯವರಿಗೆ ದೂರು ನೀಡಬಹುದು ಅಥವಾ ಆಯೋಗದ ದೂರು ನೀಡುವ ಆಪ್ ಸಿವಿಜಿಲ್ ನಲ್ಲೂ ದೂರು ನೀಡಬಹುದಾಗಿದೆ ಎಂದು ತಿಳಿಸಿದ್ದಾರೆ.