ಮಂಗಳೂರು: ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಪಕ್ಷದ ಬೂತ್ ಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಬಂದಾಗ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಹೋಯ್ ಕೈಯ್ ನಡೆದಿದೆ. ಈ ಸಂದರ್ಭ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಮೂವರು ಕಾಂಗ್ರೆಸ್ ಕಾರ್ಯಕರ್ತರು, ಪೊಲೀಸರಿಗೂ ಗಾಯ: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್, ಮತದಾನ ಮುಗಿದ ಬಳಿಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದೆ. ಪರಸ್ಪರ ಘೋಷಣೆ ಕೂಗಿದ ವೇಳೆ ಗಲಾಟೆ ಆಗಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ನಮ್ಮ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಿಣದಲ್ಲಿದ್ದು ಹೆಚ್ಚುವರಿ ಭದ್ರತೆ ಹಾಕಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೂಡುಶೆಡ್ಡೆಯಲ್ಲಿ ಚೆಕ್ ಪೋಸ್ಟ್ ಹಾಕಿ ವಾಹನ ತಪಾಸಣೆ ನಡೆಸುತ್ತಿದ್ದೇವೆ. ಅಲ್ಲದೆ ಈ ಪ್ರದೇಶಕ್ಕೆ ಬರುವ ಹೊರಗಿನ ವಾಹನಗಳ ಮೇಲೆ ನಿಗಾ ಇಡಲಾಗುತ್ತದೆ ಎಂದು ತಿಳಿಸಿದ್ದಾರೆ.