ಮಂಗಳೂರು: ರಾಜ್ಯ ಸರಕಾರವು ದಿವ್ಯಾಂಗರಿಗಾಗಿ ನೀಡಲಾಗುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ವಿಶೇಷ ಚೇತನರಿಗೆ 2021-22ನೇ ಸಾಲಿನಲ್ಲಿ ನೀಡಲಾಗುವ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ರಾಜ್ಯ ಸರಕಾರವು ದಿವ್ಯಾಂಗರ ಬದುಕಿನಲ್ಲಿ ಹೊಸ ಚೈತನ್ಯ ಮೂಡಿಸುವ ಸಲುವಾಗಿ ನೀಡುವ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ಅರ್ಹ ಫಲಾನುಭವಿಗಳನ್ನು ಗುರುತಿಸಿ ವಿತರಿಸಲಾಗಿದೆ. ಸಮಾಜದಲ್ಲಿ ಎಲ್ಲರಂತೆ ಬದುಕು ರೂಪಿಸಲು ಅವರಿಗೆ ಸದಾ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಶಕಿಲಾ ಕಾವಾ, ಭರತ್ ಸೂಟರ್ ಪೇಟೆ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಚಂದ್ರಶೇಖರ ಜಯನಗರ, ಕಮಲಾಕ್ಷಿ, ನಯನ ವಿಶ್ವನಾಥ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.