ಮಂಗಳೂರು: ಕರಾವಳಿ ಭಾಗದ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿಯವರು ಶಕ್ತಿ ತುಂಬಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶುಕ್ರವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುದಿನಗಳ ನಂತರ ಪ್ರಧಾನಿಯವರು ಕರಾವಳಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ಇಲ್ಲಿಗೆ ಆಗಮಿಸಿದ ಸಂದರ್ಭದಲ್ಲಿ ಹಲವು ಯೋಜನೆಗಳಿಗೆ ಮಂಜೂರಾತಿ ನೀಡಿದ್ದಾರೆ.
3800 ಕೋಟಿ ಮೌಲ್ಯದ ಯೋಜನೆಗಳನ್ನು ಅವರು ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಈ ಪ್ರದೇಶದ ಅಭಿವೃದ್ಧಿಗೆ ಸಹಾಯ ಮಾಡುವ ಹೊಸ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ.
ಈ ಯೋಜನೆಗಳು ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವುದು, ಬಂದರುಗಳನ್ನು ಬಲಪಡಿಸುವುದು, ವ್ಯಾಪಾರವನ್ನು ಸುಧಾರಿಸುವುದು ಮತ್ತು ಉದ್ಯೋಗವನ್ನು ಸೃಷ್ಟಿಸುವ ಗುರಿಯನ್ನು ಹೊಂದಿವೆ.
ಪ್ರಧಾನ ಮಂತ್ರಿ ಮಸ್ತ್ಯ ಸಂಪದ ಯೋಜನೆಯಡಿ 100 ಆಳ ಸಮುದ್ರ ಮೀನುಗಾರಿಕೆ ದೋಣಿಗಳನ್ನು ಮೋದಿ ಮಂಜೂರು ಮಾಡಿದ್ದಾರೆ. ಇದಲ್ಲದೆ, ಅವರು ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ವಿಸ್ತರಿಸಿದ್ದಾರೆ.
ಈ ಪ್ರದೇಶಕ್ಕೆ ರಾಜ್ಯ ಸರ್ಕಾರದಿಂದ ಮಂಜೂರಾದ ಹಲವು ಯೋಜನೆಗಳಿಗೂ ಇಂದು ಚಾಲನೆ ನೀಡಲಾಗುವುದು ಎಂದರು.