ಮಂಗಳೂರು: ದೇಶದಲ್ಲೇ ಅತೀ ಹೆಚ್ಚು ಭ್ರಷ್ಟ ಸರ್ಕಾರ ಕರ್ನಾಟಕದಲ್ಲಿದ್ದು, ಡಬಲ್ ಎಂಜಿನ್ ಸರಕಾರದಿಂದ ಜನರು ಪಶ್ಚಾತಾಪ ಪಡುತ್ತಿದ್ದಾರೆ. ದೇಶದಲ್ಲಿ ಒಂದು ರೀತಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣವಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕದ ಈ ಬಾರಿ ವಿಧಾನಸಭಾ ಚುನಾವಣೆ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ದೇಶದ ಪ್ರಜಾಪ್ರಭುತ್ವದ ಉಳಿವಿಗಾಗಿ ಮಹತ್ವದ್ದು. ಮುಂಬರುವ 2024 ರ ಲೋಕಸಭಾ ಚುನಾವಣೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಅಳಿವು ಉಳಿವಿನ ನಿರ್ಣಯ ಚುನಾವಣೆ ಆಗಲಿದೆ ಎಂದು ತಿಳಿಸಿದರು.
ದೇಶದ ಪ್ರಧಾನಿ ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ ಪ್ರಶ್ನೆ ಮಾಡಿದ್ದಕ್ಕೆ ಸಂಸದ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದುಗೊಳಿಸಿರುವುದು ದೇಶದಲ್ಲೇ ಪ್ರಥಮ. ದೇಶದ ಸಾಂವಿಧಾನಿಕ ಸಂಸ್ಥೆಗಳನ್ನು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡದಿರುವುದು ಗಮನಿಸಿದರೆ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣ ಸೃಷ್ಟಿ ಆಗಿರುವುದು ಸ್ಪಷ್ಟ ಎಂದು ತಿಳಿಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರದ ಡಬಲ್ ಎಂಜಿನ್ ಸರಕಾರ ಕಾರ್ಯನಿರ್ವಹಿಸುತ್ತಿದೆ. ಮುಖ್ಯಮಂತ್ರಿ 40 ಪರ್ಸೆಂಟ್ ಕಮಿಷನ್ ಭ್ರಷ್ಟಾಚಾರದ ಆರೋಪದಲ್ಲಿ ದ್ದಾರೆ. ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂಪಾಯಿ ದರ ನಿಗದಿ ಆಗಿದೆ ಎಂದು ಬಿಜೆಪಿ ಶಾಸಕರೇ ಆರೋಪ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಈ ಬಾರಿ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಜನಾಭಿಪ್ರಾಯ ಉಂಟಾಗಿದೆ. ಕಾಂಗ್ರೆಸ್ ಗೆ ಸ್ಪಷ್ಟ ಬಹುಮತದಿಂದ ಅಧಿಕಾರದ ಗದ್ದುಗೆ ಏರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭಂಡಾರಿ, ಇಬ್ರಾಹಿಂ ಕೋಡಿಜಾಲ್, ನವೀನ್ ಡಿಸೋಜ, ಸಂತೋಷ್ ಕುಮಾರ್ ಶೆಟ್ಟಿ ಇದ್ದರು.